ವಿಜಯಪುರ ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರು ನಗರದ ಬೆನ್ನೆಲುಬು ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.
ವಿಜಯಪುರ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿರುವುದು ಶ್ಲಾಘನೀಯ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಸೌಲಭ್ಯ ಕಲ್ಪಿಸಲು ಪಾಲಿಕೆ ಬದ್ಧವಾಗಿದೆ. ಕರ್ತವ್ಯದ ವೇಳೆ ಸಮವಸ್ತ್ರ, ಮಾಸ್ಕ್ ಹಾಗೂ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸಬೇಕು” ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, “ನಗರದ ಸ್ವಚ್ಛತೆ ಹಾಗೂ ಸೌಂದರ್ಯದ ಹಿಂದೆ ಪೌರಕಾರ್ಮಿಕರ ಪರಿಶ್ರಮವಿದೆ. ಮನೆ-ಮನೆ ಕಸ ಸಂಗ್ರಹಿಸುವ ವೇಳೆ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನೀಡುವಂತೆ ಸಾರ್ವಜನಿಕರಿಗೆ ಕಟ್ಟುನಿಟ್ಟಾಗಿ ತಿಳಿಸಬೇಕು. ವೈಜ್ಞಾನಿಕ ಕಸ ಸಂಗ್ರಹಣೆ ಹಾಗೂ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದರು. ಪೌರಕಾರ್ಮಿಕರು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮಾತನಾಡಿ, “ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಕ್ರಮ ಕೈಗೊಳ್ಳಲಾಗಿದೆ. 116 ಪೌರಕಾರ್ಮಿಕರಿಗೆ ಹಕ್ಕುಪತ್ರ, 60 ಮಂದಿಗೆ ಟ್ಯಾಬ್ ವಿತರಿಸಲಾಗಿದ್ದು, ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸಲಾಗುತ್ತಿದೆ. ಪೌರಕಾರ್ಮಿಕರಿಗಾಗಿ ನಿರ್ಮಿಸಲಾಗುತ್ತಿರುವ ಸುವಿಧಾ ಕೇಂದ್ರದ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರ ಉದ್ಘಾಟಿಸಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ, ಕ್ರೀಡಾಕೂಟ ವಿಜೇತರಿಗೆ ಬಹುಮಾನ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು.
ಮಹಾವೀರ ಬೋರಣ್ಣವರ ರಚನೆಯ ‘ಕರುಳ ಬಳ್ಳಿಯ ಕಂಬನಿಯ ಕಥೆಗಳು’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಉಪ ಮೇಯರ್ ಸುಮಿತ್ರಾ ಜಾಧವ, ಪಾಲಿಕೆ ಸದಸ್ಯರಾದ ಜವಾಹರ, ಸ್ವಪ್ನಾ ಕಣಮುಚನಾಳ, ರಾಜು ಮಗಿಮಠ, ಆರತಿ ಶಹಾಪೂರ, ಪ್ರೇಮಾನಂದ ಬಿರಾದಾರ, ಚೆನ್ನು ಕಟ್ಟಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.




