ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಜಿಲ್ಲೆಯ 13 ತಾಲ್ಲೂಕುಗಳಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ಇದೀಗ ತಮ್ಮ ಪ್ರತಿಭೆ ಪ್ರದರ್ಶಿಸಲು ಸಜ್ಜಾಗಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಜಾವೇದ್ ಜಮಾದಾರ್, ತಾಲ್ಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಮುಂದಿನ ಹಂತಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಸರು ತರಬೇಕು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ನಾಗರಾಜ ಲಂಬು ಮಾತನಾಡಿ, ಜೀವನದಲ್ಲಿ ಕಲಿಕೆಗೆ ನೀಡುವಷ್ಟೇ ಮಹತ್ವವನ್ನು ಕ್ರೀಡೆಗೂ ನೀಡಬೇಕು. ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಲು ವ್ಯಾಯಾಮ, ಯೋಗ ಹಾಗೂ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಒತ್ತು ನೀಡಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಬೋವಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವುದು ಮುಖ್ಯ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ಹೊರತರುವಲ್ಲಿ ಕ್ರೀಡೆ ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಉತ್ತಮ ಮನೋಭಾವ, ತಾಳ್ಮೆ, ಶಿಸ್ತು ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ರವಿಕುಮಾರ, ಹನುಮಂತ ರಾಮಪುರ, ರವಿಕುಮಾರ ವಾಲಿ, ಪ್ರಿಯಾಂಕಾ, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.




