ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಚಲಿಸುತ್ತಿದ್ದ ಟಿಪ್ಪರ್‌ನ ಟೈರ್ ಹಠಾತ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ಅಶೋಕ ಉಟಗಿ, ಅವರ ಪತ್ನಿ ರಾಧಾಬಾಯಿ ಹಾಗೂ ಸರ್ಕಾರಿ ಬಸ್ಸಿನ ಚಾಲಕ ಹನುಮಂತ ಛವಲಾದಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೀಡಾದ ಟಿಪ್ಪರ್ ಚಡಚಣದ ಕಡೆಗೆ ಪ್ರಯಾಣಿಸುತ್ತಿತ್ತು, ಅದೇ ವೇಳೆ ಚಡಚಣದಿಂದ ವಿಜಯಪುರಕ್ಕೆ ಹೊರಟಿದ್ದ ಸರ್ಕಾರಿ ಬಸ್ಸಿಗೆ ಇದು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಚಡಚಣ ಪಿಎಸ್‌ಐ ಸೋಮೇಶ ಗೆಜ್ಜಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ವಿವಿಯಲ್ಲಿ ಲಕ್ಷಾಂತರ ರೂ. ಶುಲ್ಕ ವಂಚನೆ ಶಂಕೆ




