ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟಿದೆ. ಕಬ್ಬಿಗೆ ನ್ಯಾಯಯುತ ಬೆಲೆ ಸಿಗಬೇಕು ಎಂದು ಆಗ್ರಹಿಸಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಮುಧೋಳದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾದ ಬೃಹತ್ ಸಭೆಯ ಬಳಿಕ ಸಾವಿರಾರು ರೈತರು ಪಾದಯಾತ್ರೆ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದರು. ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶವನ್ನು ಹೊರಹಾಕಿದರು,
ಕಬ್ಬು ಬೆಳೆಗೆ ಸೂಕ್ತ ಬೆಲೆ ಸಿಗುವ ತನಕ ನಾವು ಹೋರಾಟ ಕೈ ಬಿಡುವುದಿಲ್ಲ. ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಭಟನೆಯ ಸ್ಥಳಕ್ಕೆ ಬರಲೇಬೇಕೆಂದು ಪಟ್ಟು ಹಿಡಿದರು. ಸಂಜೆ 7:30 ಕ್ಕೆ ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ಶ್ವೇತಾ ಬಿಡಿಕರ ಅವರು ರೈತರ ಅಹವಾಲನ್ನು ಆಲಿಸಿದರು. ನಂತರ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಹಾಗೂ ಬೆಲೆ ನಿಗದಿಯಾಗುವವರೆಗೆ ಯಾವುದೇ ಕಾರ್ಖಾನೆ ಪ್ರಾರಂಭ ಮಾಡದಂತೆ ಮಾಲೀಕರಿಗೆ ಸೂಚಿಸಲಾಗುವುದು ಎಂದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಭೇಟಿ ನೀಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದ ರೈತರು, ಸಂಗೊಳ್ಳಿ ರಾಯಣ್ಣ ವೃತ್ತದಲ್ಲೇ ಅಹೋರಾತ್ರಿ ಧರಣಿ ಹೂಡಿದ್ದಾರೆ




