- ಅಥಣಿ ಕ್ಷೇತ್ರದ ಟಿಕೆಟ್‌ಗಾಗಿ ಮಹೇಶ್ ಕುಮಟಳ್ಳಿ, ಲಕ್ಷ್ಮಣ ಸವದಿ ಗುದ್ದಾಟ
- ಅಥಣಿ ಟಿಕೆಟ್ ಸಿಗದಿದ್ದಲ್ಲಿ ಸವದಿ ಕಾಂಗ್ರೆಸ್ ಸೇರುವುದು ಖಚಿತ ಎನ್ನಲಾಗಿದೆ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು, ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದೆ. ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಕಡೆ ಮುಖಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ ಬಿಜೆಪಿಯ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಆಪರೇಷನ್ ಕಮಲದ ಸೂತ್ರಧಾರ, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಆಪ್ತ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ. ಲಕ್ಷ್ಮಣ ಸವದಿ ಕೂಡ ಟಿಕೆಟ್‌ಗಾಗಿ ಒತ್ತಡ ಹೇರುತ್ತಿದ್ದಾರೆ.
2004, 2008 ಹಾಗೂ 2013ರಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾದ ಸವದಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಹೇಶ ಕುಮಠಳ್ಳಿ ವಿರುದ್ಧ ಸೋತಿದ್ದರು. 2019ರಲ್ಲಿ ‘ಆಪರೇಷನ್ ಕಮಲ’ದ ಮೂಲಕ ಮಹೇಶ ಕುಮಠಳ್ಳಿ ಅವರನ್ನು ಬಿಜೆಪಿಗೆ ಕರೆತಂದು ಗೆಲ್ಲಿಸಲಾಗಿತ್ತು. ಅಥಣಿ ಕ್ಷೇತ್ರ ಬಿಟ್ಟುಕೊಟ್ಟ ಕಾರಣಕ್ಕೆ ಸವದಿ ಅವರಿಗೆ ವಿಧಾನ ಪರಿಷತ್‌ಗೆ ನೇಮಕ ಮಾಡಿ, ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು.
ಅಂತಿಮವಾಗಿ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಕೊಡಲಿದೆ ಎಂಬ ಮಾತುಗಳು ಕ್ಷೇತ್ರದಲ್ಲಿ ದಟ್ಟವಾಗಿ ಕೇಳಿ ಬರುತ್ತಿವೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್‌ನ ಪ್ರಮುಖ ನಾಯಕರು ಅದರಲ್ಲೂ ಸಿದ್ದರಾಮಯ್ಯ ಆಪ್ತರು ಲಕ್ಷ್ಮಣ ಸವದಿ ಅವರನ್ನು ಸಂಪರ್ಕ ಮಾಡಿ, ಪಕ್ಷಕ್ಕೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ ಟಿಕೆಟ್ ಹಂಚಿಕೆ ಕಗ್ಗಂಟು: ಯಡಿಯೂರಪ್ಪರನ್ನು ಹೊರಗಿಟ್ಟು ಸಭೆ; ಬೇಸರದಿಂದ ಬೆಂಗಳೂರಿಗೆ ವಾಪಾಸು
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದ ಕೆಲವು ಕಾಂಗ್ರೆಸ್ ಶಾಸಕರೂ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ಕೈಬಿಟ್ಟು ಸವದಿ ಜೊತೆಗೂಡಿ ಸೋಮವಾರ ಇದ್ದಕ್ಕಿದ್ದಂತೆ ದೆಹಲಿಗೆ ತೆರಳಿದ್ದಾರೆ. ಸವದಿ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರು ಈ ಶಾಸಕರಿಗೆ ವಹಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಸೇರುವ ವಿಚಾರವಾಗಿ ಈಗಾಗಲೇ ಸವದಿ ಸಹ ಕೊಪ್ಪಳ ಕಾಂಗ್ರೆಸ್ ಶಾಸಕರೊಬ್ಬ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸೋನಿಯಾ, ರಾಹುಲ್ ಸಮ್ಮುಖದಲ್ಲೇ ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಯೋಚಿಸಿದ್ದಾರಂತೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಾಯುತ್ತಿರುವ ಸವದಿ, ಪಟ್ಟಿಯಲ್ಲಿ ತಮಗೆ ಟಿಕೆಟ್ ಘೋಷಣೆಯಾಗದಿದ್ದಲ್ಲಿ ಸವದಿ ಕಾಂಗ್ರೆಸ್ ಸೇರುವುದು ಖಚಿತ ಎನ್ನಲಾಗಿದೆ.
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಅಥಣಿ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸಿದೇ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಸವದಿ ಒಂದು ವೇಳೆ ಕಾಂಗ್ರೆಸ್ಸಿಗೆ ಬಂದಲ್ಲಿ ಅಥಣಿ ಕ್ಷೇತ್ರದ ಈ ತಿಕ್ಕಾಟ ರಾಜ್ಯ ರಾಜಕಾರಣದಲ್ಲಿ ಮುಂದೆ ದೊಡ್ಡ ಬೆಳವಣಿಗೆಗೂ ಕಾರಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುತ್ತಾರೆ ಎನ್ನುವ ವಿಚಾರ ಎಲ್ಲಡೇ ಹಬ್ಬುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಬಿಜೆಪಿ ಅಶ್ವತ್ಥನಾರಾಯಣ ಮೂಲಕ ಹೇಳಿಕೆ ಬಿಡುಗಡೆ ಮಾಡಿ, “ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಬಿಜೆಪಿಯಲ್ಲೇ ಇದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆಯಾಗುತ್ತೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದಿದ್ದಾರೆ. ಆದರೆ, ಸವದಿ ಮಾತ್ರ ಈ ಎಲ್ಲ ವಿಚಾರಗಳ ಬಗ್ಗೆ ತಮ್ಮ ಸ್ಪಷ್ಟ ನಿಲುವು ಏನು ಎಂಬುದು ಎಲ್ಲಿಯೂ ಬಾಯಿಬಿಟ್ಟಿಲ್ಲ.