ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಶಿವಕುಮಾರ್ ಅವರು ರಾಜ್ಯ ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್‌ನ ಪ್ರಬಲ ನಾಯಕ ಡಿ ಕೆ ಶಿವಕುಮಾರ್ ಅವರು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಈಗ ಅವರ ಸಹೋದರ ಡಿ ಕೆ ಸುರೇಶ್ ಕೂಡ ನಾಮಪತ್ರ ಸಲ್ಲಿಸಿ ಅಚ್ಚರಿ ಹುಟ್ಟಿಸಿದ್ದಾರೆ.
ಕನಕಪುರ ಕ್ಷೇತ್ರವನ್ನು ಡಿ ಕೆ ಶಿವಕುಮಾರ್ ಪ್ರತಿನಿಧಿಸುತ್ತಾ ಬಂದಿದ್ದಾರೆ. ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು.
ಡಿ ಕೆ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಡಿ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದೇಕೆ?
ಡಿ ಕೆ ಶಿವಕುಮಾರ್ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ ಕೆ ಸುರೇಶ್ ಸಹ ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್‌ಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಡಿ ಕೆ ಸುರೇಶ್ ಅವರು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿತ್ತು. ಆರ್ ಅಶೊಕ್ ಅವರನ್ನು ಬಿಜೆಪಿ ಕನಕಪುರದಿಂದ ಕಣಕ್ಕಿಳಿಸಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸಹ ಅಶೋಕ್ ವಿರುದ್ಧ ಡಿ ಕೆ ಸುರೇಶ್ ಅವರನ್ನು ಪದ್ಮನಾಭನಗರದಲ್ಲಿ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಸಿತ್ತು. ಆದರೆ, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ರಘುನಾಥ್ ನಾಯ್ಡು ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಕುತಂತ್ರ: ಡಿ ಕೆ ಸುರೇಶ್
ಡಿ ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾನು ಸಹ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಕನಕಪುರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಡಿ ಕೆ ಸುರೇಶ್ ತಿಳಿಸಿದರು.
“ಚುನಾವಣಾ ಆಯೋಗದ ಅಧಿಕಾರಿಗಳೂ ಸಹ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಅವರು ಸರ್ಕಾರದ ಸೂಚನೆಯಂತೆ ಏನು ಬೇಕಾದರೂ ಮಾಡಬಹುದು. ಹೀಗಾಗಿ ನಾವು ಸಹ ಎಚ್ಚರಿಕೆ ಇಟ್ಟಿದ್ದೇವೆ. ಮುಂದಿನ ಬೆಳವಣಿಗೆಗಳನ್ನು ನೀವೇ ಕಾದು ನೋಡಿ” ಎಂದರು.