ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

Date:

ರಾಜ್ಯದಲ್ಲಿ 26ಕ್ಕೂ ಹೆಚ್ಚು ಮಂದಿ ಬಿಜೆಪಿ ವಿರುದ್ಧ ಬಂಡಾಯವೆದಿದ್ದಾರೆ. ರಾಜ್ಯದಲ್ಲಿ ಬೆಳೆಯುತ್ತಿರುವ ಬಂಡಾಯದ ಜ್ವಾಲೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಸಿಲುಕಿಕೊಂಡಿದ್ದಾರೆ. ತಮ್ಮ ಚುನಾವಣಾ ಭವಿಷ್ಯದ ಅಸ್ಪಷ್ಟತೆಯ ನಡುವೆ ಚುನಾವಣೆ ಎದುರಿಸುತ್ತಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಣ ದಿನಕಳೆದಂತೆ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಪಕ್ಷದೊಳಗಿನ ಬಂಡಾಯದ ಕಾವು ಹೆಚ್ಚಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಹೆಚ್ಚಾಗಿ ಬಿಜೆಪಿಯ ಹಳೆಯ ಮುಖಂಡರು ಬಂಡಾಯದ ಬಾವುಟ ಬೀಸಿದ್ದಾರೆ. ಇದು ಧಾರವಾಡ, ಬೆಳಗಾವಿ, ಹಾವೇರಿ ಭಾಗದ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಆಂತರಿಕ ಬೇಗುದಿಯಿಂದ ಸೋಲುಣ್ಣಬಹುದಾದ ಆತಂಕ ಅಭ್ಯರ್ಥಿಗಳ ಕಾಡತೊಡಗಿದೆ.

2018ರ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ 30 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ, 35-40 ಸ್ಥಾನಗಳನ್ನು ಗೆಲ್ಲಬೇಕೆಂದು ಕೇಸರಿ ಪಡೆ ಪ್ರಯತ್ನಿಸುತ್ತಿದೆ. ಈ ಗುರಿಯನ್ನು ತಲುಪಲು ಮತ್ತು ಮತದಾರರನ್ನು ಸೆಳೆಯಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಒಬ್ಬರಾದ ಮೇಲೊಬ್ಬರಂತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರ್‍ಯಾಲಿಗಳನ್ನು ನಡೆಸುತ್ತಿದ್ದಾರೆ. ಈ ನಡುವೆ, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಮತ್ತು ಎರಡನೇ ಪಟ್ಟಿಯನ್ನು ಪ್ರಕಟಿಸಿ, ಕೆಲವು ಹಾಲಿ ಶಾಸಕರು ಮತ್ತು ಪ್ರಮುಖ ನಾಯಕರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಪಕ್ಷದ ನಡೆ ಹಲವರು ಬಂಡಾಯವೇಳುವಂತೆ ಪ್ರೇರೇಪಿಸಿದೆ. ಅವರೆಲ್ಲರೂ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇದು, ಪಕ್ಷದ ಸಮೀಕರಣಗಳನ್ನು ತಲೆಕೆಳಗೆ ಮಾಡಿದೆ.

ಧಾರವಾಡ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಬಂಡಾಯದ ಕಾವನ್ನು ಎದುರಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌, ಹುಬ್ಬಳ್ಳಿ-ಧಾರವಾಡ ಪೂರ್ವ (ಎಸ್‌ಸಿ) ಧಾರವಾಡ ಗ್ರಾಮಾಂತರ ಮತ್ತು ಕುಂದಗೋಳದಲ್ಲಿ ಬಿಜೆಪಿಯ ಸ್ಥಳೀಯ ನಾಯಕರು ಬಂಡಾಯದ ಬಾವುಟ ಬೀಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿದೆ. ಅವರಿಗೆ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್‌ ಕೇಳಿದೆ. ಆದರೆ, ಹೈಕಮಾಂಡ್‌ ಮಾತಿಗೆ ‘ಡೋಂಟ್‌ಕೇರ್‌’ ಎಂದಿರುವ ಶೆಟ್ಟರ್‌, ಚುನಾವಣೆಯಲ್ಲಿ ಸ್ಪರ್ದಿಸುವು ಶತಸಿದ್ಧ ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹುಬ್ಬಳ್ಳಿ-ಧಾರವಾಡ ಪೂರ್ವ (ಎಸ್‌ಸಿ)ದಲ್ಲಿ ಬಿಜೆಪಿ ತೊರೆದಿರುವ ಮಾಜಿ ಶಾಸಕ ವೀರಭದ್ರಪ್ಪ ಹಾಲಹರ್ವಿ ಈಗ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ. ಕುಂದಗೋಳದಲ್ಲಿ ಟಿಕೆಟ್ ಸಿಗದೇ ಬಂಡಾಯವೆದ್ದಿರುವ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡರ್ ಕಾಂಗ್ರೆಸ್ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಧಾರವಾಡ ಗ್ರಾಮಾಂತರ ಹಾಲಿ ಶಾಸಕ ಸಿ.ಎಂ ನಿಂಬಣ್ಣನವರ್‌ಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಾಗಿ, ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ನಾಗರಾಜ್ ಚಬ್ಬಿ ಅವರಿಗೆ ಟಿಕೆಟ್ ಸಿಕ್ಕಿದೆ. ನಿಂಬಣ್ಣನವರ್‌ ಬಂಡಾಯವೇಳದಂತೆ ಅವರನ್ನು ಚಬ್ಬಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಿಂದ ಅಸಮಾಧಾನಗೊಂಡಿರುವ ಬಿಜೆಪಿಯ ಹಿರಿಯ ಕಾರ್ಯಕರ್ತ ತವನಪ್ಪ ಅಷ್ಟಗಿ ಅವರು ಪಕ್ಷ ತೊರೆದಿದ್ದು, ಧಾರವಾಡ ಗ್ರಾಮಾಂತರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ಹಾಲಿ ಶಾಸಕ ರಾಮಣ್ಣ ಲಮಾಣಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರು ಜೆಡಿಎಸ್‌ ಸೇರಿ, ಆ ಪಕ್ಷದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಅವರು ತಮ್ಮ ಮುಂದಿನ ನಡೆ ಬಗ್ಗೆ ನಿರ್ಧರಿಸಲು ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಾಜಿ ವಿಧಾನ ಪರಿಷತ್‌ ಸದಸ್ಯ ಆರ್. ಶಂಕರ್ ಎನ್‍ಸಿಪಿಗೆ ಸೇರ್ಪಡೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಕೆಪಿಜೆಪಿ ಟಿಕೆಟ್‌ನಿಂದ ಗೆದ್ದು ಬಿಜೆಪಿ ಸೇರಿದ್ದ ಮಾಜಿ ಸಚಿವ ಆರ್‌.ಶಂಕರ್‌ಗೆ ಟಿಕೆಟ್‌ ನಿರಾಕರಿಸಲಾಗಿದ್ದು, ಅವರೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಅವರು ಎನ್‌ಸಿಪಿ ಸೇರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ಮತ್ತೊಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ್ ಕುಮಾರ್ ಪಾಟೀಲ್ ಕೂಡ ರಾಣೆಬೆನ್ನೂರು ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳನ್ನು ಎದುರಿಸುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಟಿಕೆಟ್ ಸಿಗದೆ ಹತಾಶೆಗೊಂಡ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಸೇರಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಸವದತ್ತಿ, ರಾಮದುರ್ಗ, ಬೆಳಗಾವಿ ಉತ್ತರ, ಕಿತ್ತೂರು ಮತ್ತು ಹುಕ್ಕೇರಿಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬಂಡಾಯ ಅಭ್ಯರ್ಥಿಗಳ ಬಿಸಿ ತಟ್ಟುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ?: ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ; ಪೀಡೆ ತೊಲಗಿತು ಎಂದ ರಮೇಶ್ ಜಾರಕಿಹೊಳಿ

ಹಾವೇರಿ ಎಸ್‌ಸಿ ಕ್ಷೇತ್ರದಲ್ಲಿ ಹಾಲಿ ಶಾಸಕ ನೆಹರು ಓಲೇಕಾರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಈಗ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಜೆಡಿಎಸ್ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ. ಓಲೇಕಾರ್ ಇತ್ತೀಚೆಗೆ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೊಮ್ಮಾಯಿ ಅವರ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವುದಾಗಿ ಬಹಿರಂಗವಾಗಿಯೇ ಹೇಳಿದ್ದಾರೆ.

ಬಸವನ ಬಾಗೇವಾಡಿ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಟಿಕೆಟ್‌ ಆಕಾಂಕ್ಷಿ ಸೋಮನಗೌಡ (ಅಪ್ಪುಗೌಡ) ಪಾಟೀಲ ಮನಗೂಳಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕಿತ್ತೂರು ಕರ್ನಾಟಕ ಮಾತ್ರವಲ್ಲದೆ, ರಾಜ್ಯದ ಇತರ ಭಾಗಗಳಲ್ಲಿಯೂ ಬಂಡಾಯ ಕಾವು ಭುಗಿಲೆದ್ದಿದೆ. ರಾಜ್ಯದಲ್ಲಿ 26ಕ್ಕೂ ಹೆಚ್ಚು ಮಂದಿ ಬಿಜೆಪಿ ವಿರುದ್ಧ ಬಂಡಾಯವೆದಿದ್ದಾರೆ. ಬೆಳೆಯುತ್ತಿರುವ ಬಂಡಾಯದ ಜ್ವಾಲೆ ರಾಜ್ಯದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಚುನಾವಣಾ ಭವಿಷ್ಯಕ್ಕೆ ಅಡ್ಡಿಯುಂಟುಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...