ಬಾಲ ಕಾರ್ಮಿಕತೆಯಿಂದ ಬಿಡುಗಡೆಗೊಂಡ ಮಕ್ಕಳನ್ನು ಮುಂದಿನ ವ್ಯಾಸಂಗಕ್ಕಾಗಿ ವಸತಿ ನಿಲಯಗಳಲ್ಲಿ ದಾಖಲಿಸಿ ಶಿಕ್ಷಣ ಮತ್ತು ಸರ್ಕಾರದ ಸೌಲಭ್ಯಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ವಾರ್ಷಿಕ ಸಾಮಾನ್ಯ ಸಭೆ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸಾಕಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು ಜಮೀನು, ಹೋಟೆಲ್, ಗ್ಯಾರೇಜ್ ಸೇರಿದಂತೆ ಇನ್ನಿತರ ಕೆಲಸಗಳಲ್ಲಿ ತೊಡಗುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಬೇಕಾಗಿದೆ. ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಮಕ್ಕಳು ಜಮೀನು ಕೆಲಸಕ್ಕೆ ತೆರಳುತ್ತಿದ್ದಾರೆ. ದಾಳಿ ಮಾಡಬೇಕು, ಜಮೀನು ಮಾಲೀಕರು ಹಾಗೂ ಕರೆದುಕೊಂಡ ಹೋಗುವ ವಾಹನದ ಮೇಲೆ ಪ್ರಕರಣ ದಾಖಲಿಸಬೇಕು ಎಂದರು.
ಪ್ರತಿ ತಿಂಗಳು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಐದರಿಂದ ಆರು ಪ್ರಕರಣ ದಾಖಲಿಸಬೇಕು. ದಾಳಿ ವೇಳೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಇರಬೇಕು. ಇಲ್ಲಿಯವರೆಗೆ ದಾಳಿ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಈ ತಿಂಗಳಿಂದ ಪ್ರತಿ ವಾರಕ್ಕೆ ಒಂದರಿಂದ ಎರಡು ದಾಳಿ ಮಾಡಬೇಕು. ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದರೆ ಇಂತಹ ಬಾಲ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ತಾಲೂಕು ಮಟ್ಟದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ನಿರ್ಮೂಲನೆ ಸಮಿತಿ ಸಭೆ ನಡೆಸಬೇಕು. ಕಾನೂನು ಅರಿವು, ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಬೇಕು. ಸ್ಲಂ ಬಡಾವಣೆ, ಎಸ್‌ಸಿ, ಎಸ್ಟಿ ಜನಾಂಗ ಇರುವ ಪ್ರದೇಶದಲ್ಲಿ ಜಾಥಾ, ಸೇರಿದಂತೆ ಇತರೆ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದರು.
ಇದೇ ವೇಳೆ ಜಿಲ್ಲಾ ಮಟ್ಟದ ಬಾಲ ಕಾರ್ಮಿಕ ಯೋಜನೆಯ ಸಭೆಗೆ ಗೈರು ಹಾಜರಾದ 13 ಇಲಾಖೆಗಳ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಗೆ ಗೈರಾಗಿದ್ದ ಪೋಲಿಸ್ ಇಲಾಖೆ, ಸಹಾಯಕ ಆಯುಕ್ತರು ಲಿಂಗಸುಗೂರು, ರಾಯಚೂರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಖಾನೆಗಳ ಸಹಾಯಕ ನಿರ್ದೇಶಕ, ಲೋಕೋಪಯೋಗಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ರೇಷ್ಮೆ ಇಲಾಖೆ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಸೇರಿ 13 ಇಲಾಖೆಗಳ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೆಲೂರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಕಾರ್ಮಿಕ ಇಲಾಖೆ ಅಧಿಕಾರಿ ಆರತಿ, ಜಿಲ್ಲಾ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಮಕ್ಕಳ ಸಹಾಯವಾಣ ಕೋ ಅರ್ಡಿನೇಟರ್ ಸುದರ್ಶನ, ಸೇರಿದಂತೆ ಇತರರು ಇದ್ದರು.