ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್‌ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ಜಟಿಲವಾಗಿತ್ತು. ಕೊನೆಗೂ ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಸಚಿವ ಸಂಪುಟ ಸೇರಲಿದ್ದಾರೆ.
ಹಲವು ಹಗ್ಗ-ಜಗ್ಗಾಟಗಳ ಮಧ್ಯೆ ಸಿಎಂ ಆಯ್ಕೆ ಹೈಕಮಾಂಡ್‌ಗೆ ಕಗ್ಗಂಟಾಗಿತ್ತು. ಈ ಮಧ್ಯೆ ಕೊನೆಗೂ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆಗೂ ಡಿ.ಕೆ.ಶಿವಕುಮಾರ್ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ.
ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜೊತೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾತುಕತೆ ನಡೆಸಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ನಿರ್ಧಾರಕ್ಕೆ ಒಪ್ಪಿಗೆ ಪಡೆಯಲಾಯಿತು ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಇಬ್ಬರೂ ನಾಯಕರನ್ನು ಕೂರಿಸಿಕೊಂಡು ಮಾತನಾಡುತ್ತಿದ್ದಾರೆ. ಪೂರ್ಣಾವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲು, ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗುವಂತೆ ಒಪ್ಪಿಸಿದ್ದಾರೆ.
ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯುತ್ತಿದ್ದು, ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಜರಿರಬೇಕಾಗಿ ಸೂಚಿಸಿದ್ದಾರೆ.