- ‘ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ನಾನು ಮುಂಚೂಣಿ’
- ‘ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ’
ಪ್ರತಿ ವರ್ಷ ರಾಜ್ಯದಿಂದ ₹4 ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದೆ. ರಾಜ್ಯಕ್ಕೆ ಮಾತ್ರ ಕೇವಲ ₹50,000 ಕೋಟಿ ಮಾತ್ರ ಕೊಡಲಾಗುತ್ತಿದೆ. ಕರ್ನಾಟಕಕ್ಕೆ ಡಬಲ್ ಎಂಜಿನ್ ಏನು ನೀಡಿದೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
“15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡುವಂತೆ ₹5,495 ಕೋಟಿಗೆ ಶಿಫಾರಸು ಮಾಡಿದೆ. ಆದರೆ, ಹಣಕಾಸು ಸಚಿವರ ಸಲಹೆ ಮೇರೆಗೆ ಅಂತಿಮ ವರದಿ ಕೈತಪ್ಪಿದೆ” ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಪ್ರತಿ ವರ್ಷ ರಾಜ್ಯದಿಂದ ₹4 ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದೆ. ರಾಜ್ಯಕ್ಕೆ ಮಾತ್ರ ಕೇವಲ ₹50,000 ಕೋಟಿ ಬರುತ್ತಿದೆ. ಕರ್ನಾಟಕಕ್ಕೆ ಡಬಲ್ ಎಂಜಿನ್ ಸರ್ಕಾರ ಏನು ನೀಡಿದೆ?” ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಮುನ್ಸೂಚನೆಯನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. “ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ನಾನು ಸಿಎಂ ಖುರ್ಚಿಯ ಆಕಾಂಕ್ಷಿಯಲ್ಲ : ಮಲ್ಲಿಕಾರ್ಜುನ ಖರ್ಗೆ
ಅಧಿಕಾರಕ್ಕೆ ಬಂದ ನಂತರ ಟಿಪ್ಪು ಜಯಂತಿಯನ್ನು ಮತ್ತೆ ಆಚರಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, “ನಾನು ಸರ್ವಾಧಿಕಾರಿಯಲ್ಲ, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಶಾಸಕರು ಮತ್ತು ಸಚಿವ ಸಂಪುಟದೊಂದಿಗೆ ಸಮಾಲೋಚಿಸುತ್ತೇನೆ” ಎಂದಿದ್ದಾರೆ.
“ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ, ಡಿ ಕೆ ಶಿವಕುಮಾರ್ ಕೂಡ ಆಕಾಂಕ್ಷಿ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಿವೆ ಎಂಬುದೆಲ್ಲ ಸುಳ್ಳು. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯಾಗುವ ಅವಕಾಶ ಸಿಗದಿದ್ದರೂ ಮುಂಬರುವ ವಿಧಾನಸಭೆ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ ಎಂದಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ನಾವು ರಾಜ್ಯದ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಮುಖ್ಯಮಂತ್ರಿ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಬಗ್ಗೆ ಕೇಳಿದಾಗ, “ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಅನ್ನು ತರಲು ನಾನು ಮುಂಚೂಣಿಯಲ್ಲಿದ್ದೇನೆ” ಎಂದಿದ್ದಾರೆ.