ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ದಯಾನಂದ, “ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.
2024ರ ಜೂನ್ನಲ್ಲಿ ರೇಣುಕಾಸ್ವಾಮಿ ಅವರ ಹತ್ಯೆಯಾಗಿತ್ತು. ಹತ್ಯೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ನಂತರ, ಪವಿತ್ರಾ ಗೌಡ ಸೇರಿದಂತೆ 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಜೈಲಿನಲ್ಲಿ ದರ್ಶನ್ ಮತ್ತು ಅವರ ಸಹಚರ ಆರೋಪಿಗಳಿಗೆ ಐಷಾರಾಮಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪದ ಮೇಲೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಲಾಗಿತ್ತು.
ಅಆರೋಗ್ಯದ ಕಾರಣ ನೀಡಿ ದರ್ಶನ್ ಅಕ್ಟೋಬರ್ 30ರಂದು ಮಧ್ಯಂತರ ಜಾಮೀನು ಪಡೆದಿದ್ದರು. ಇದೀಗ, ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕ ಸದಸ್ಯಪೀಠ ಆದೇಶ ಹೊರಡಿಸಿದೆ.