“ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.
ಸೋನು ನಿಗಮ್ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿಯಾಗುತ್ತಿದ್ದಂತೆಯೇ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಧರ್ಮರಾಜ್ ಎ. ಅವರು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ 3ರಂದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ನೂತನ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ವಿಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು. ಭಾಷೆ, ಜಾತಿ, ಸಮುದಾಯದಂತಹ ಕಾರಣಗಳಿಂದ ಗುಂಪುಗಳಲ್ಲಿ ಸೇಡಿನ ಭಾವನೆ ಉಂಟುಮಾಡುವುದು, ಧಾರ್ಮಿಕ ಅಥವಾ ಭಾಷಿಕ ಭಾವನೆಗಳನ್ನು ಕೆರಳಿಸುವುದು ಸೇರಿದಂತೆ ಈ ಮೂರು ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಮಂಗಳೂರು | ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಫಾಝಿಲ್ ಸಹೋದರ ಕೂಡ ಭಾಗಿ: ಪೊಲೀಸ್ ಕಮಿಷನರ್ ಅಗರ್ವಾಲ್
ಸೋನು ನಿಗಮ್ ವಿರುದ್ಧ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 351(2), 352(I) & 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಏನಿದು ಪ್ರಕರಣ?
ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, “ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು” ಎಂದು ಹೇಳಿಕೆ ನೀಡಿದ್ದರು. ಇದು ಕನ್ನಡಪರ ಸಂಘಟನೆ ಹಾಗೂ ಕನ್ನಡಿಗರ ಕೆಂಗಣ್ಣಿಗೆ ಕಾರಣವಾಗಿದೆ.