ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್ ಮತ್ತು ಅವರ ಸಹಚರರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 17ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಈ ಹಿಂದೆ, ಆದೇಶಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ, ಶುಕ್ರವಾರ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ, ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ದೀಪಕ್ ಹಾಗೂ ರಾಜ್ಯದ ವಿವಿಧ ಜೈಲುಗಳಿದ್ದ ಇತರ 14 ಮಂದಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಒಂದು ವಾರದ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ.