ಪ್ರಸಿದ್ಧ ಚಲನಚಿತ್ರ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಪಿ ಸುಶೀಲಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿ ಸುಶೀಲಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? 2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಾಂತಾರ ಚಿತ್ರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯ ವೈದ್ಯರು ಸುಶೀಲಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರಿಗೆ ಸೂಕ್ತ ಔಷಧಿ ನೀಡಲಾಗಿದ್ದು ಇದೀಗ ಅವರ ಹೊಟ್ಟೆ ನೋವು ಕಡಿಮೆಯಾಗಿದೆ. ಅಲ್ಲದೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಪಿ. ಸುಶೀಲಾ ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅಸಂಖ್ಯಾತ ಹಾಡುಗಳನ್ನು ಹಾಡಿದ್ದಾರೆ. ಸಂಗೀತ ಲೋಕದಲ್ಲಿ ಅವರು ತಮ್ಮದೇ ಆದ ವಿಶೇಷ ಸ್ಥಾನವನ್ನು ಗಳಿಸಿದ್ದಾರೆ. ವಿವಿಧ ಭಾಷೆಗಳಲ್ಲಿ ಹಾಡುಗಳನ್ನು ಹಾಡುವ ಮೂಲಕ ಪಿ. ಸುಶೀಲ ಅವರು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ , ಏಷಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.
