ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಕರ್ನಾಟಕ ಹೈಕೋರ್ಟ್ಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
ಪವಿತ್ರಾ ಗೌಡ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿದ್ದಾರೆ. ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
“ಈ ಪ್ರಕರಣದಲ್ಲಿ 4 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಈಗಾಗಲೇ ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದ್ದರಿಂದ ಆರೋಪಿ ಪವಿತ್ರಾಗೌಡ ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು” ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್ ಅವರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್ಗೆ ಪವಿತ್ರಾ ಗೌಡ ಅರ್ಜಿ
ಆದ್ದರಿಂದ ಅರ್ಜಿದಾರೆ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಅವರು ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಹೈಕೋರ್ಟ್ನಿಂದ ಹಿಂಪಡೆದಿದ್ದಾರೆ.
ಇನ್ನು ಈ ಹಿಂದೆ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ 31ರಂದು ವಜಾಗೊಳಿಸಿದೆ.
ಈ ನಡುವೆ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್ ಮತ್ತು ಅವರ ಸಹಚರರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 17ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
