ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ ಆರೋಪದ ಮೇರೆಗೆ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.
ನಟಿ ರಮ್ಯಾ ಅವರು ದರ್ಶನ್ ಅಭಿಮಾನಿಗಳ ಬಗ್ಗೆ ಪೋಸ್ಟ್ ಮಾಡಿದ ವಿಚಾರ ಕಳೆದ ಕೆಲ ದಿನಗಳಿಂದ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ರಮ್ಯಾ ಪೋಸ್ಟ್ ಶೇರ್ ಮಾಡಿಕೊಂಡಿದ್ದರು.
ಈ ಪೋಸ್ಟ್ ಬಳಿಕ ನಟಿ ವಿರುದ್ಧ ಡಿಬಾಸ್ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದರು. ಇದಾದ ಬಳಿಕ ನಟಿ ರಮ್ಯಾ ರೇಣುಕಸ್ವಾಮಿ ಮೆಸೇಜ್‌ಗೂ, ದರ್ಶನ್ ಫ್ಯಾನ್ಸ್ ಮೆಸೇಜ್‌ಗೂ ಯಾವುದೇ ವ್ಯತ್ಯಾಸವಿಲ್ಲವೆಂದು ಪೋಸ್ಟ್ ಮಾಡಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?
ರಮ್ಯಾ ವಿರುದ್ಧ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಮಾಜಿ ಸಂಸದೆ ಹಾಗೂ ಚಲನಚಿತ್ರ ನಟ ರಮ್ಯಾ ಅವರ ವಿರುದ್ಧ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ನೀಡಿರುವ ಬಗ್ಗೆ ವರದಿಯಾಗಿರುತ್ತದೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗುತ್ತಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿರುತ್ತದೆ.
ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ
ಮಹಿಳಾ ಆಯೋಗದ ಈ ಪತ್ರವನ್ನು ನಟಿ ರಮ್ಯಾ ಹಂಚಿಕೊಂಡಿದ್ದಾರೆ.
ರಮ್ಯಾ ವಿರುದ್ಧ ವಿಜಯಲಕ್ಷ್ಮಿ ಪೋಸ್ಟ್
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ರಮ್ಯಾ ಅವರನ್ನು ಉದ್ದೇಶಿಸಿಯೇ ವಿಜಯಲಕ್ಷ್ಮಿ ಈ ಪೋಸ್ಟ್ ಹಾಕಿದ್ದಾರೆ ಎಂದು ಪರ–ವಿರೋಧಿಗಳು ಚರ್ಚಿಸುತ್ತಿದ್ದಾರೆ.
‘ಮೂರ್ಖ ತನ್ನ ಮಾತುಗಳಿಂದ ಎಲ್ಲರಿಗೂ ಪರಿಚಯನಾಗುತ್ತಿರುತ್ತಾನೆ. ಜಾಣ ಯಾವಾಗಲೂ ಮೌನಿ ಆಗಿರುತ್ತಾನೆ’ ಎಂದು ಬುದ್ಧನ ಚಿತ್ರವಿರುವ ಫೋಟೊವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್ ಮಾಡಿದ್ದರು.
ಅಂದಿನಿಂದ (ಜುಲೈ 24) ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ನಡೆಯುತ್ತಿದೆ. ಶನಿವಾರ (ಜುಲೈ 26) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ರಮ್ಯಾ, ‘ದರ್ಶನ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಮ್ಗೆ ಸ್ವಾಗತ. ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಮೆಂಟ್‌ಗಳೇ ಸಾಕ್ಷಿ’ ಎಂದಿದ್ದರು.
ಇದಕ್ಕೆ ದರ್ಶನ್ ಅಭಿಮಾನಿಗಳು ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿರುವ ರಮ್ಯಾ, ‘ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ’ ಎಂದಿದ್ದಾರೆ.
ಅದರ ಜೊತೆಗೆ ದರ್ಶನ್ ಅಭಿಮಾನಿಗಳು ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
— Ramya/Divya Spandana (@divyaspandana) July 28, 2025
