ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ಸಂಜೆ ದಕ್ಷಿಣ ಒಳನಾಡು, ಕರವಾಳಿ ಮತ್ತು ಉತ್ತರ ಒಳನಾಡು ಭಾಗದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೂ 4 ದಿನಗಳ ಮಳೆಯಾಗಲಿದ್ದು, ಮೇ 7ರವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ3 ಗಂಟೆಯಿಂದಲೇ ಮಳೆ ಅಬ್ಬರ ಆರಂಭವಾಗುವ ಸಾಧ್ಯತೆ ಇದ್ದು, ಇಂದು ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಏನಾಗಲಿದೆ ಎಂಬ ಪ್ರಶ್ನೆಯೂ ಕ್ರಿಕೆಟ್ ಅಭಿಮಾನಿಗಳಲ್ಲಿದೆ.
ಬಂಗಾಳಕೊಲ್ಲಿಯಲ್ಲಿ ನಿರಂತರ ಚಂಡಮಾರುತ ಪರಿಚಲನೆಯಾಗಿತ್ತಿದೆ. ಪರಿಣಾಮವಾಗಿ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಕರ್ನಾಟಕ ದಕ್ಷಿಣ ಜಿಲ್ಲೆಗಳಲ್ಲಿ ವೇಗವಾಗಿ ಗಾಳಿ ಬೀಸುತ್ತಿದ್ದು, ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ವೇಗವಿದೆ ಎಂದು ಇಲಾಖೆ ತಿಳಿಸಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಅಲ್ಲದೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಹೆಚ್ಚು ಮಳೆ ನಿರೀಕ್ಷೆ ಇರುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ನಿಜಕ್ಕೂ ಜಾತಿಗಣತಿ ನಡೆಸುತ್ತದಾ ಬಿಜೆಪಿ; ಸಿದ್ಧವಿರುವ ವರದಿ ಜಾರಿ ಮಾಡದೆ ವಿಳಂಬ ಮಾಡುತ್ತಿರುವುದೇಕೆ ಕಾಂಗ್ರೆಸ್?
ಶನಿವಾರ ರಾತ್ರಿ, ಎಐಎಲ್ ಟೂರ್ನಿಯ ನಿರ್ಣಾಯಕ ಪಂದ್ಯವು ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಬೆಂಗಳೂರಿನಲ್ಲಿ ನಡೆಯಲಿದೆ. ತವರು ನೆಲದಲ್ಲಿ ಆಡುತ್ತಿರುವ ಆರ್‌ಸಿಬಿ ತಂಡವು ಸಿಎಸ್‌ಕೆಯನ್ನು ಮಣಿಸಲಿದೆ ಎಂಬ ವಿಶ್ವಾಸ ಆರ್‌ಸಿಬಿ ಅಭಿಮಾನಿಗಳಲ್ಲಿದೆ. ಆದರೆ, ಬೆಂಗಳೂರಿನಲ್ಲಿ ಮಧ್ಯಾಹ್ನ 3 ಗಂಟೆಯಿಂದಲೇ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ.