ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಘಟನೆ ನಡೆದಿದ್ದು, ಕಾರು ಚಾಲಕ ಗೋಪಾಲ್ (45) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆಗೆ ಚಲಿಸುತ್ತಿದ್ದ ಕಾರು ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ತಿಳಿದು ಬಂದಿದೆ.
ಮೃತರಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ಇಬ್ಬರು ಮಹಿಳೆಯರಿದ್ದಾರೆ. ಮಕ್ಕಳಿಬ್ಬರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.