ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಪ್ರಕರಣ ಸಂಬಂಧ ಇಂದು ಪ್ರಜ್ವಲ್ ರೇವಣ್ಣ ಹಾಗೂ ಮತ್ತೊಬ್ಬ ಆರೋಪಿ ಪ್ರತಾಪ್ ಅವರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಬಾಡಿ ವಾರೆಂಟ್ ಆಧಾರದ ಮೇಲೆ ಇಬ್ಬರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಈ ಪ್ರಕರಣದಲ್ಲಿ ಪ್ರತಾಪ್ ಎ1 ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ತನಿಖೆಗೆ ಅಗತ್ಯವಿರುವ ಕೆಲವು ಪ್ರಮುಖ ಮಾಹಿತಿಗಳನ್ನು ಆರೋಪಿಗಳಿಂದ ಪಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವುದು ಅಗತ್ಯವಾಗಿದೆ ಎಂದು ಪೊಲೀಸರು ವಾದಿಸಿದರು.
ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್, ಪೆನ್‌ಡ್ರೈವ್ ಹಾಗೂ ನೋಟ್‌ಬುಕ್ ಪತ್ತೆಯಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಶಪಡಿಸಿಕೊಂಡಿರುವ ಮೊಬೈಲ್ ಹಾಗೂ ಪೆನ್‌ಡ್ರೈವ್‌ಗಳನ್ನು ಪೊಲೀಸರು ತಾಂತ್ರಿಕ ಪರಿಶೀಲನೆಗಾಗಿ ರಿಟ್ರೀವ್‌ಗೆ ಕಳುಹಿಸಿದ್ದಾರೆ.
ಇಂದು ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಅವರು ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಹಾಗೂ ಜೈಲು ಪರಸ್ಪರ ದೂರದಲ್ಲಿಲ್ಲ. ವಿಚಾರಣೆ ಅಗತ್ಯವಿದ್ದರೆ ಪೊಲೀಸರು ಜೈಲಿಗೆ ತೆರಳಿ ವಿಚಾರಣೆ ನಡೆಸಬಹುದು. ಈಗಾಗಲೇ ಪ್ರಜ್ವಲ್ ರೇವಣ್ಣ ತನಿಖೆಗೆ ಸಹಕರಿಸಿದ್ದು, ಮುಂದೆಯೂ ಸಹಕರಿಸಲಿದ್ದಾರೆ. ಹೀಗಾಗಿ ಪೊಲೀಸ್ ಕಸ್ಟಡಿಗೆ ನೀಡುವ ಅಗತ್ಯವಿಲ್ಲ ಎಂದು ವಾದಿಸಿದರು.
ಇದನ್ನೂ ಓದಿ: ಅತ್ಯಚಾರ ಆರೋಪಿ ಪ್ರಜ್ವಲ್ ರೇವಣ್ಣ
ಇದಕ್ಕೆ ಪ್ರತಿಯಾಗಿ ಸರ್ಕಾರಿ ಪರ ವಕೀಲ ಸತೀಶ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ಕೆಲವು ಪ್ರಮುಖ ಮಾಹಿತಿಗಳನ್ನು ಪಡೆಯಬೇಕಿದೆ. ತನಿಖೆಯನ್ನು ಮುಂದುವರಿಸಲು ಅವರ ವಿಚಾರಣೆ ಅಗತ್ಯವಾಗಿರುವುದರಿಂದ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.
ಪೊಲೀಸರು ಹಾಗೂ ಪ್ರಜ್ವಲ್ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಪೊಲೀಸರ ಅರ್ಜಿಯನ್ನು ಮಾನ್ಯ ಮಾಡಿ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಕೋರ್ಟ್ ಆದೇಶದಂತೆ ಇಂದಿನಿಂದಲೇ ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸಲಿದ್ದಾರೆ.





