ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಒಟ್ಟು 32 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಬುಧವಾರ ಮಹತ್ವದ ಆದೇಶವನ್ನ ಕರ್ನಾಟಕ ಸರ್ಕಾರ ಹೊರಡಿಸಿದೆ. ಕೇವಲ ಅಧಿಕಾರಿಗಳ ವರ್ಗಾವಣೆ ಮಾತ್ರವಲ್ಲದೆ, ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಪುನರ್ರಚಿಸಲಾಗಿದ್ದು, ಹೊಸದಾಗಿ ಸೃಷ್ಟಿಸಲಾದ ವಲಯ ಆಯುಕ್ತರ ಹುದ್ದೆಗಳಿಗೂ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಜಂಟಿ ಕಾರ್ಯದರ್ಶಿ ಅಕ್ಷಯ್ ಶ್ರೀಧರ್ ಅವರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಬೆಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರ ಕಮಿಷನರೇಟ್ ವ್ಯವಸ್ಥೆಯಲ್ಲಿ ಮಹತ್ವದ ಮಾರ್ಪಾಡುಗಳನ್ನು ತಂದಿದೆ.
ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರದ ನೂತನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಖ್ಯ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಈವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ, ಅಪರಾಧ ನಿಯಂತ್ರಣ, ಸಂಚಾರ ನಿರ್ವಹಣೆ ಮತ್ತು ಸಾರ್ವಜನಿಕರಿಗೆ ತ್ವರಿತ ಸ್ಪಂದನೆ ನೀಡಲು ಕಮಿಷನರೇಟ್ ವ್ಯಾಪ್ತಿಯನ್ನು ಪುನರ್ರಚಿಸಲಾಗಿದೆ. ಇದರ ಭಾಗವಾಗಿ ಸೃಷ್ಟಿಸಲಾಗಿರುವ ನೂತನ ವಲಯ ಆಯುಕ್ತರ ಹುದ್ದೆಗಳಿಗೆ ಅನುಭವಿ ಐಪಿಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಇದು ರಾಜಧಾನಿಯ ಪೊಲೀಸ್ ಆಡಳಿತವನ್ನು ವಿಕೇಂದ್ರೀಕರಿಸಲು ನೆರವಾಗಲಿದೆ.
ರಾಜ್ಯದ ಪ್ರಮುಖ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು, ವಲಯ ಐಜಿಪಿಗಳು ಹಾಗೂ ವಿವಿಧ ಘಟಕಗಳ ಮುಖ್ಯಸ್ಥರನ್ನೂ ಈ ಆದೇಶದಲ್ಲಿ ಬದಲಾಯಿಸಲಾಗಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಬೆಂಗಳೂರಿನಂತಹ ಬೃಹತ್ ಮಹಾನಗರದ ಆಡಳಿತಾತ್ಮಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಈ ದೊಡ್ಡ ಮಟ್ಟದ ಬದಲಾವಣೆ ತರಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ನೂತನವಾಗಿ ನೇಮಕಗೊಂಡಿರುವ ಅಧಿಕಾರಿಗಳು ತಕ್ಷಣವೇ ತಮ್ಮ ಹೊಸ ಹುದ್ದೆಗಳ ಅಧಿಕಾರ ಸ್ವೀಕರಿಸುವಂತೆ ಸರ್ಕಾರ ಸೂಚಿಸಿದೆ.



