ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನವೆಂಬರ್ 29ರಂದು ಮಾದಾವರದ ನೈಸ್ (NICE) ಮೈದಾನದಲ್ಲಿ ಈ ಸಂಗೀತ ಕಾರ್ಯಕ್ರಮ ನಿಗದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಶಿವರಾಜ್ ಎಂ.ಜೆ. ಅವರು ನೀಡಿದ ದೂರಿನ ಆಧಾರದ ಮೇಲೆ ನವೆಂಬರ್ 9ರಂದು ಎಫ್‌ಐಆರ್ ದಾಖಲಾಗಿದೆ.
ನವೆಂಬರ್ 9ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಯಿಂದ (ಕಂಟ್ರೋಲ್ ರೂಂ) ಪಿಎಸ್‌ಐ ಶಿವರಾಜ್ ಅವರಿಗೆ ಕರೆ ಬಂದಿತ್ತು. [email protected] ಎಂಬ ವಿಳಾಸದಿಂದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಆಯುಕ್ತರ ಇ–ಮೇಲ್ ([email protected]) ಹಾಗೂ [email protected] ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿರುವುದಾಗಿ ಕಂಟ್ರೋಲ್ ರೂಂನಿಂದ ಮಾಹಿತಿ ನೀಡಲಾಗಿತ್ತು.
ದೋಸಾಂಜ್ ಅವರ ಸಂಗೀತ ಕಾರ್ಯಕ್ರಮದ ವೇಳೆ ಹಾಗೂ ಮಾದಾವರ ಮೆಟ್ರೊ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸುವುದಾಗಿ ಇ–ಮೇಲ್‌ನಲ್ಲಿ ಎಚ್ಚರಿಕೆ ನೀಡಲಾಗಿತ್ತು. ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರಬಾರದು ಮತ್ತು ಮೆಟ್ರೊದಲ್ಲಿ ಪ್ರಯಾಣಿಸಬಾರದು ಎಂದು ಎಚ್ಚರಿಸಿದ್ದ ದುಷ್ಕರ್ಮಿಗಳು, ಸಂದೇಶದ ಕೊನೆಯಲ್ಲಿ ಖಾಲಿಸ್ತಾನ ಪರ ಘೋಷಣೆಯನ್ನು ಉಲ್ಲೇಖಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಈ ಮಾಹಿತಿ ಆಧರಿಸಿ ಶಿವರಾಜ್ ಅವರು ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ವ್ಯವಸ್ಥಾಪಕರನ್ನು ಸಂಪರ್ಕಿಸಿ ವಿಚಾರಿಸಿದ್ದಾರೆ. ನವೆಂಬರ್ 29ರಂದು ನೈಸ್ ಮೈದಾನದಲ್ಲಿ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿರುವುದನ್ನು ವ್ಯವಸ್ಥಾಪಕರು ದೃಢಪಡಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು, ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶಿವರಾಜ್ ಅಧಿಕೃತ ದೂರು ದಾಖಲಿಸಿದ್ದಾರೆ.
ಅಪರಿಚಿತ ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)–2023ರ ಕಲಂ 351(4) (ಅನಾಮಧೇಯ ಸಂವಹನದ ಮೂಲಕ ಕ್ರಿಮಿನಲ್ ಬೆದರಿಕೆ) ಮತ್ತು ಕಲಂ 353(1)(ಬಿ) (ಸಾರ್ವಜನಿಕ ಅಶಾಂತಿಗೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



