ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಎರಡು ಬಾರಿ ನೋಟಿಸ್ ನೀಡಿದರೂ ಸರಿಯಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಗುರುವಾರ (ಆ.21) ಉಜಿರೆಯಲ್ಲಿರುವ ಮನೆಗೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, “ನೋಟಿಸ್‌ಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ಅವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದ್ದರು. ವಶಕ್ಕೆ ಪಡೆದ ಬಳಿಕ ಬಂಧಿಸಿದ್ದ ಪೊಲೀಸರು, ವೈದ್ಯಕೀಯ ತಪಾಸಣೆ ನಡೆಸಿದರು. ಆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ, ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಲಾಗಿದೆ.
ನ್ಯಾಯಾಲಯದ ಆದೇಶದ ಬಳಿಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ. ತಿಮರೋಡಿಯವರನ್ನು ಕೋರ್ಟಿಗೆ ಹಾಜರುಪಡಿಸುವಾಗ ಕೋರ್ಟ್ ಸುತ್ತಮುತ್ತ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.
ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು
ತಿಮರೋಡಿಯವರ ಬಂಧನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ನಿಷೇಧಾಜ್ಞೆ ಆ.21 ರಂದು ಮಧ್ಯಾಹ್ನ 1 ಗಂಟೆಯಿಂದ ಆ.22 ರಂದು ಮಧ್ಯಾಹ್ನ 1 ಗಂಟೆಯವರೆಗೆ ಅನ್ವಯವಾಗಲಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಪೊಲೀಸ್ ಅಧೀಕ್ಷಕರ ಮನವಿಯ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ.
