ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು ತೀರ್ಪು ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆದಿತ್ತು. ವಾದ, ಪ್ರತಿವಾದ ಆಲಿಸಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು.
ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಆದೇಶ ಹೊರಡಿಸಿದ ರೀತಿ ನೋಡಿದರೆ ಇದು ಖುಲಾಸೆಗೊಳಿಸುವ ಪ್ರಕರಣ ಎಂದು ನ್ಯಾಯಾಲಯ ನಿರ್ಧರಿಸಿದಂತೆ ಕಾಣುತ್ತಿದೆ’ ಎಂದು ಕಟುವಾಗಿ ಟೀಕಿಸಿತ್ತು. ಜುಲೈ 17ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಪೀಠವು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ವಿವೇಚನಾ ಅಧಿಕಾರವನ್ನು ಬಳಕೆ ಮಾಡಿರುವ ರೀತಿಯು ಸ್ವಲ್ಪವೂ ಒಪ್ಪುವಂತಿಲ್ಲ’ ಎಂದು ಹೇಳಿತ್ತು.
ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಹೇಳಿದ್ದೇನು?
ರೇಣುಕಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ಜಾಮೀನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠ “ಹೈಕೋರ್ಟ್ ಆದೇಶ ಬದಿಗೆ ಸರಿಸಲಾಗಿದೆ. ಆರೋಪಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿತು.
ಹೈಕೋರ್ಟ್ ಆದೇಶ ವಿಕ್ಷಿಪ್ತ ದೋಷಗಳಿಂದ ಕೂಡಿದೆ ಎಂದ ನ್ಯಾಯಾಲಯ “ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗವನ್ನು ಬಿಂಬಿಸುತ್ತದೆ… ಜಾಮೀನು ಮಂಜೂರು ಮಾಡಿದರೆ ಅದು ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಉಂಟಾಗಬಹುದು” ಎಂದು ಸುಪ್ರೀಂ ಕೋರ್ಟ್ ತೀರ್ಪು ಹೇಳಿದೆ.
“ನಾವು ಎಲ್ಲ ವಿಚಾರಗಳನ್ನೂ ಪರಿಗಣಿಸಿದ್ದೇವೆ. ಹೈಕೋರ್ಟ್ ಆದೇಶವು ಗಂಭೀರ ದೌರ್ಬಲ್ಯಗಳಿಂದ ಕೂಡಿರುವುದು ಸ್ಪಷ್ಟವಾಗಿದೆ’ ಎಂದು ಹೇಳಿದೆ. ನಿಖರ ಆರೋಪಗಳು ಮತ್ತು ವಿಧಿವಿಜ್ಞಾದನ ಪ್ರಯೋಗಾಲಯದ ಹಲವು ಸಾಕ್ಷ್ಯಗಳು ಜಾಮೀನು ರದ್ದುಗೊಂಡಿರುವುದೇಕೆ ಎಂಬುದನ್ನು ಸಮರ್ಥಿಸುತ್ತವೆ. ಈ ಪ್ರಕರಣದ ವಿಚಾರಣೆ ನಡೆಸಲು ವಿಚಾರಣಾ ನ್ಯಾಯಾಲಯವೇ ಸೂಕ್ತ. ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡಲಾಗಿದೆ” ಎಂದು ಪೀಠ ಹೇಳಿದೆ.
“ನ್ಯಾಯಮೂರ್ತಿ ಮಹಾದೇವನ್ ಅವರು ಬಹಳ ಪ್ರೌಢಿಮೆಯ ತೀರ್ಪನ್ನು ನೀಡಿದ್ದಾರೆ. ಇದು ಅಮೋಘವಾದಂತಹ ತೀರ್ಪಾಗಿದೆ. ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಹಂತದಲ್ಲಿ ಯಾವುದೇ ಬೆಲೆ ತೆತ್ತಾದರೂ ಕಾನೂನಾತ್ಮ ಆಡಳಿತವನ್ನು ಎತ್ತಿಹಿಡಿಯಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮಿಗಿಲಲ್ಲ ಅಥವಾ ಕೆಳಗಿಲ್ಲ. ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಾತ್ಮಕ ಆಡಳಿತವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಆದೇಶದ ಕುರಿತು ಹೇಳಿದ್ದಾರೆ.
ಹಿನ್ನೆಲೆ
ಚಿತ್ರದುರ್ಗ ಮೂಲದ 33 ವರ್ಷದ ರೇಣುಕಸ್ವಾಮಿ ಅವರ ಮೃತದೇಹ ̄2024ರ ಜೂನ್ 9 ರಂದು ಪತ್ತೆಯಾಗಿತ್ತು. ದರ್ಶನ್ ಸೂಚನೆ ಮೇರೆಗೆ ನಡೆದ ಹಲ್ಲೆಯಲ್ಲಿ ಉಂಟಾದ ಗಾಯಗಳಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು.
ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶವನ್ನು ಕಳುಹಿಸಿದ್ದ ಹಿನ್ನೆಲೆಯಲ್ಲಿ ದರ್ಶನ್ ಸೂಚನೆ ಮೇರೆಗೆ ಆತನನ್ನು ದರ್ಶನ್ ಸಹಚರರು ಅಪಹರಿಸಿ ಬೆಂಗಳೂರಿನ ಶೆಡ್ ಒಂದರಲ್ಲಿ ಹಲ್ಲೆ ನಡೆಸಿ ಹತ್ಯೆಗೈಯಲಾಗಿತ್ತು. ಖುದ್ದು ದರ್ಶನ್ ಸಹ ಹಲ್ಲೆ ನಡೆಸಿದ್ದರು ಎಂದು ಅರೋಪಿಸಲಾಗಿತ್ತು.
ಕಳೆದ ವರ್ಷ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಕಳೆದ ವರ್ಷ ಅಕ್ಟೋಬರ್ 30ರಂದು, ವೈದ್ಯಕೀಯ ಆಧಾರದ ಮೇಲೆ ಹೈಕೋರ್ಟ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ತರುವಾಯ, ಡಿಸೆಂಬರ್ 13, 2024 ರಂದು ದರ್ಶನ್, ಪವಿತ್ರಾ ಮತ್ತು ಇತರ ಐದು ಆರೋಪಿಗಳಿಗೆ ನಿಯಮಿತ ಜಾಮೀನು ದೊರೆತಿತ್ತು.