ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜ.27) ಅನಾವರಣಗೊಳಿಸಿದರು.
ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ದೆಹಲಿಯಲ್ಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ರಿಜ್ವಾನ್ ಅರ್ಶದ್, ಪೊನ್ನಣ್ಣ, ಸಲೀಮ್ ಅಹ್ಮದ್, ನಜೀರ್ ಅಹ್ಮದ್, ಡಿ ಟಿ ಶ್ರೀನಿವಾಸ್, ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಶಿ, ಮಾಜಿ ಸಚಿವ ಎಚ್ ಎಂ ರೇವಣ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಮತ್ತಿತರರು ಭಾಗವಹಿಸಿದ್ದರು.
ಭುವನೇಶ್ವರಿಯ ಪುತ್ಥಳಿ ಅನಾವರಣದ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾವು ಎಲ್ಲ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ” ಎಂದು ತಿಳಿಸಿದರು.
“ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ. ನಾವು ಎಲ್ಲ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ನಾವು ನಮ್ಮ ಸಹೋದರ ಮತ್ತು ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು” ಎಂದರು.
ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್
“ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್ ಪಡೆಯಲಾಗುವುದು” ಎಂದು ಇದೇ ಸಂದರ್ಭದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಕನ್ನಡ ಧ್ವಜಾರೋಹಣ ಕಡ್ಡಾಯ: ಡಿಸಿಎಂ
ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ಎಲ್ಲ ಸಂಘ ಸಂಸ್ಥೆಗಳಲ್ಲೂ ನವೆಂಬರ್ 1 ರಂದು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು. ಆಮೂಲಕ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ ಕನ್ನಡದ ವೈಭವವನ್ನು ಬಿತ್ತುವ ಕೆಲಸ ಮಾಡಲಾಗುವುದು” ಎಂದರು.