ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.
ರೈತರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ. ಹಂತ ಹಂತವಾಗಿ ಬೇಡಿಕೆ ಈಡೇರಿಸುತ್ತಲೇ ಇದ್ದೇವೆ. ನಾನು ಸದಾ ರೈತ ಸಮುದಾಯದ ಪರವಾಗಿ ಇರುವೆ” ಎಂದು ತಿಳಿಸಿದರು.
ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್‌ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.