ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಇಂದು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಧ್ಯಮಗಳು ಆತುರದಲ್ಲಿವೆ. ಈ ವಾರದೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಹೇಳಿದರು.
ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ನಡೆಯಲಿರುವ ಸಭೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿ ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಗುವುದು. ರಾಜ್ಯದ ಬರ ಪರಿಸ್ಥಿತಿ, ನೀರಿನ ಸಮಸ್ಯೆ, ಕಾವೇರಿ, ಮಹದಾಯಿ, ಮೇಕೆದಾಟು ಹಾಗೂ ಕೃಷ್ಣ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಕುರಿತು ಸಂಸದರೊಂದಿಗೆ ಚರ್ಚೆ ನಡೆಸಲಿದ್ದೇವೆ. ರಾಜ್ಯದ ಹಿತಾಸಕ್ತಿಯ ವಿಷಯಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಮನವಿ ಮಾಡುತ್ತೇನೆ” ಎಂದು ಹೇಳಿದರು.
ಇದನ್ನೂ ಓದಿ: ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಆರ್ ಅಶೋಕ ಆಗ್ರಹ
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಸಂಸದರನ್ನು ಒಟ್ಟುಗೂಡಿಸಿ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸುತ್ತಿರುವುದಾಗಿ ತಿಳಿಸಿದ ಅವರು, ಬಳಿಕ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಹಿರಿಯ ರಾಜಕೀಯ ಮುಖಂಡರೊಂದಿಗೆ ರಾಜ್ಯದ ಪ್ರಮುಖ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಗುವುದು” ಎಂದು ಶಿವಕುಮಾರ್ ತಿಳಿಸಿದರು.




