12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಕುರಿತು ತಮ್ಮ ‘ಬಸವ ಮಂಟಪ’ ಕೃತಿ ಮತ್ತು ಸಂದರ್ಶನವೊಂದರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಅಮೆರಿಕ ನಿವಾಸಿ ಕನ್ನಡ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ದಾವಣಗೆರೆಯವರಾಗಿದ್ದು, ಅಮೆರಿಕದ ಚಿಕಾಗೋದಲ್ಲಿ ನೆಲೆಸಿರುವ ರವಿ ಹಂಜ್ ಅವರು ಇಂದು (ನವೆಂಬರ್ 21) ದೇಶ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ. ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ವಿಮಾನ ಹತ್ತುವ ಸಿದ್ಧತೆಯಲ್ಲಿದ್ದರು.
ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಳಗಾವಿ ಪೊಲೀಸರು ಈಗಾಗಲೇ ರವಿ ಹಂಜ್ ವಿರುದ್ಧ ‘ಲುಕ್‌ಔಟ್ ನೋಟಿಸ್’ (Lookout Notice) ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರನ್ನು ತಡೆದು ವಶಕ್ಕೆ ಪಡೆದಿದ್ದು, ಕರ್ನಾಟಕ ಪೊಲೀಸರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ವರದಿಯಾಗಿದೆ.
ಇದನ್ನೂ ಓದಿ: ವಿಜಯಪುರ |ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿ ಹಂಜ್ ವಿರುದ್ಧ ಕ್ರಮಕ್ಕೆ ದೂರು
ನವೆಂಬರ್ 13ರಂದು ಪ್ರಸಾರವಾದ ಸಂದರ್ಶನವೊಂದರಲ್ಲಿ ಮತ್ತು ತಮ್ಮ ‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರ ವಚನಗಳು ಹಾಗೂ ತತ್ವಗಳನ್ನು ತಿರುಚಿ, ಅತ್ಯಂತ ಅವಹೇಳನಕಾರಿಯಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಸೇರಿದಂತೆ ಹಲವರು ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಬಸವನ ಬಾಗೇವಾಡಿ ಸೇರಿದಂತೆ ರಾಜ್ಯದ ಕನಿಷ್ಠ ನಾಲ್ಕು ಕಡೆಗಳಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿವಾದಿತ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಲೇಖಕರು ಹಾಗೂ ಪ್ರಕಾಶಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಅಲ್ಲದೆ, ರವಿ ಹಂಜ್ ಅವರ ಅವಹೇಳನಕಾರಿ ಹೇಳಿಕೆಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲೂ ಸಂಪುಟ ತೀರ್ಮಾನಿಸಿತ್ತು.
ಇನ್ನು ವಿವಾದ ಭುಗಿಲೆದ್ದ ಬಳಿಕ ರವಿ ಹಂಜ್ ಅವರು ತಮ್ಮ ಕೃತಿ ಸಂಶೋಧನಾಧಾರಿತವಾದುದು ಎಂದು ಸಮರ್ಥಿಸಿಕೊಂಡು, ಬಳಿಕ ಕ್ಷಮೆಯಾಚನೆಯ ವಿಡಿಯೋವನ್ನೂ ಬಿಡುಗಡೆ ಮಾಡಿದ್ದರು. ಇದೀಗ ಬೆಂಗಳೂರು ಪೊಲೀಸರ ವಿಶೇಷ ತಂಡವು ರವಿ ಹಂಜ್ ಅವರನ್ನು ಕಸ್ಟಡಿಗೆ ಪಡೆಯಲು ಕೊಚ್ಚಿಗೆ ತೆರಳಿದೆ.
ಲೇಖಕ ರವಿ ಹಂಜ್ ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ ಬಗ್ಗೆ ಅತ್ಯಂತ ಕೀಳುಮಟ್ಟದ ಭಾಷೆ ಬಳಸಿ ಸಮಾಜದ ಶಾಂತಿ ಕದಡಲು ಯತ್ನಿಸಿದ ರವಿ ಹಂಜ್ ಒಬ್ಬ ಭಯೋತ್ಪಾದಕ. ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ಆತನನ್ನು ಪೊಲೀಸರು ವಶಕ್ಕೆ ಪಡೆದಿರುವುದು ಅತ್ಯಂತ ಸ್ವಾಗತಾರ್ಹ ಕ್ರಮವಾಗಿದೆ. ಸರ್ಕಾರ ಆತನ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಂಡು ತಕ್ಕ ಪಾಠ ಕಲಿಸಬೇಕು” ಎಂದು ನಾರಾಯಣಗೌಡ ಆಗ್ರಹಿಸಿದ್ದಾರೆ.



