ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿರ್ದೇಶನ ಮೇಲೆ, ಪೊಲೀಸರು ನಾಲ್ವರು ಅಂಗಡಿ ಮಾಲೀಕರನ್ನು ಬಂಧಿಸಿದ್ದು, ಆ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ 19 ಮಕ್ಕಳನ್ನು ರಕ್ಷಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು. ಸುಮಾರು ಇಡೀ ದಿನ ಅಲ್ಲಿಯೇ ಕಳೆದಿದ್ದು, ರೈತರು, ವ್ಯಾಪಾರಿಗಳು ಹಾಗೂ ಮಹಿಳಾ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಕೆಲವು ಮಕ್ಕಳು ಕಠಿಣ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದನ್ನು ಅವರು ಗಮನಿಸಿದ್ದು, ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಡಿ.ಕೆ ಶಿವಕುಮಾರ್ ಅವರ ಸೂಚನೆಯ ಬಳಿಕ ಉತ್ತರ ವಿಭಾಗದ ಎಸಿಪಿಗಳು, ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಹಾಗೂ ಕಾರ್ಮಿಕ ಇಲಾಖೆ ಇನ್‌ಸ್ಪೆಕ್ಟರ್‌ಗಳನ್ನು ಒಳಗೊಂಡ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳು ಎಪಿಎಂಸಿ ಆವರಣದ ವಿವಿಧ ಅಂಗಡಿಗಳು, ಸರಕು ಲೋಡ್ ಮತ್ತು ಅನ್‌ಲೋಡ್ ಮಾಡುವ ಪ್ರದೇಶಗಳನ್ನು ಪರಿಶೀಲಿಸಿದ್ದು, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ 19 ಮಕ್ಕಳನ್ನು ರಕ್ಷಿಸಿವೆ.
ರಕ್ಷಿಸಲಾದ 19 ಮಕ್ಕಳಲ್ಲಿ 13 ಮಂದಿ ಬಿಹಾರದವರು. ಇವರಲ್ಲಿ ಒಬ್ಬ ಬಾಲಕಿಯೂ ಸೇರಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ತಲಾ ಇಬ್ಬರು, ರಾಜಸ್ಥಾನ ಮತ್ತು ಕರ್ನಾಟಕದಿಂದ ತಲಾ ಒಬ್ಬರು ಸೇರಿದ್ದಾರೆ. ರಕ್ಷಿಸಲಾದ ಸುಮಾರು 10 ಮಕ್ಕಳು ಸರಕುಗಳನ್ನು ಲೋಡ್ ಮತ್ತು ಅನ್‌ಲೋಡ್ ಮಾಡುವಂತಹ ಶ್ರಮದಾಯಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಂಡ ಆರೋಪದಲ್ಲಿ ಎ. ಶಾಹಿದ್ ಮಜೀದ್ (60), ಬಿ. ಪ್ರಕಾಶ್ (39), ಎಸ್. ಅಮೀರ್ (33) ಹಾಗೂ ಎ. ಮೊಹಮ್ಮದ್ ಸೈಫ್ (27) ಎಂಬ ನಾಲ್ವರು ಅಂಗಡಿ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಬಾಲಕಾರ್ಮಿಕ ನಿಷೇಧ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.
ಇದರ ಜೊತೆಗೆ, ಬಾಲ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರ ಅಡಿಯಲ್ಲಿ ಐದು ಅಂಗಡಿ ಮಾಲೀಕರ ವಿರುದ್ಧ ನೇರವಾಗಿ ನ್ಯಾಯಾಲಯಕ್ಕೆ ವರದಿಗಳನ್ನು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಶವಂತಪುರ ಎಪಿಎಂಸಿಯಲ್ಲಿ ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವ ಬಗ್ಗೆ ಇನ್ನು ಮುಂದೆ ನಿಯಮಿತವಾಗಿ ತಪಾಸಣೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿರುವ ಇತರ ಅಂಗಡಿಗಳಲ್ಲಿಯೂ ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಲಾಗುತ್ತಿದೆಯೇ ಎಂಬುದನ್ನು ಪತ್ತೆಹಚ್ಚಲು ಪೊಲೀಸ್ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಗಾ ಮುಂದುವರಿಸಲಿದ್ದಾರೆ.




