ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂದು ಘೋಷಿಸಿದ್ದರು. ಶುಕ್ರವಾರ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.
ಇದನ್ನು ಓದಿದ್ದೀರಾ? BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ
ಇನ್ನು ನಿನ್ನೆ ನಡೆದ ಕೊನೆಯ ವಿಚಾರಣೆ ವೇಳೆ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಮನವಿ ಮಾಡಿದ್ದಾರೆ. “ನನ್ನ ವಿರುದ್ಧ ರಾಜಕೀಯ ಪಿತೂರಿಯಿಂದಾಗಿ ನಾನು ಈಗ ಸಂಕಷ್ಟದಲ್ಲಿ ಸಿಲುಕಿದ್ದೇನೆ. ನನಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನಿದ್ದು, ಅವರು ವಿವಾಹದ ವಯಸ್ಸಿನವರು. ನಾನು ರೈತರಾಗಿದ್ದು, ಸಾವಿರಾರು ಜಾನುವಾರುಗಳನ್ನು ಸಾಕುತ್ತಿದ್ದೇನೆ. ಕಳೆದ 27 ವರ್ಷಗಳಿಂದ ರಾಜಕೀಯದಲ್ಲಿದ್ದು, ಯಾರೊಬ್ಬರಿಗೂ ಅನ್ಯಾಯ ಮಾಡಿಲ್ಲ. ರಾಜಕೀಯ ಕಾರಣಕ್ಕಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ” ಎಂದು ಕಣ್ಣೀರಿಟ್ಟು ಮನವಿ ಮಾಡಿದ್ದರು.
ಇನ್ನೊಂದೆಡೆ 16 ಅಪರಾಧಿಗಳೆಲ್ಲರಿಗೂ ಕ್ಷಮಾದಾನವಿಲ್ಲದ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಿಬಿಐ ಮನವಿ ಮಾಡಿದ್ದರು. ಸಮಾಜಕ್ಕೆ ಕಠಿಣ ಸಂದೇಶ ರವಾನಿಸಲು ಗರಿಷ್ಠ ಶಿಕ್ಷೆ ಅಗತ್ಯವಾಗಿದೆ ಎಂದು ಸಿಬಿಐ ವಾದಿಸಿತ್ತು. ಗುರುವಾರ ವಾದ ವಿವಾದಗಳನ್ನು ಆಲಿಸಿದ ಪೀಠವು ಶುಕ್ರವಾರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಿದೆ. ತಲಾ 30 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ಯೋಗೇಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಕೋರ್ಟ್ ಆದೇಶಿಸಿದೆ.
ಏನಿದು ಯೋಗಿಶ್ ಗೌಡ ಕೊಲೆ ಪ್ರಕರಣ?
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು 2016ರ ಜೂನ್ 15ರಂದು ಜಿಮ್ ಮುಂಭಾಗದಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅದರಲ್ಲಿ 15ನೇ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ.
ಈ ಪ್ರಕರಣದ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿ ಈ ಕೊಲೆಯಲ್ಲಿ ವಿನಯ್ ಕುಲಕರ್ಣಿ ಪಾತ್ರವಿದೆ ಎಂದು ದೂರಿದ್ದರು. ಹಾಗೆಯೇ ತನ್ನನ್ನೂ ಕೊಲೆ ಮಾಡಲು ವಿನಯ್ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 20 ಲಕ್ಷ ರೂಪಾಯಿ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಆರೋಪ ಮಾಡಲಾಗಿತ್ತು.
ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದರು. ಆದರೆ, ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಸಿಬಿಐ ಆರೋಪಿಸಿದೆ. ವಿನಯ್ ಕುಲಕರ್ಣಿ ಅವರನ್ನು ಈ ಕೊಲೆಯ ಮುಖ್ಯ ಸಂಚುಗಾರ (Main Conspirator) ಎಂದು ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರು 2020 ರಲ್ಲಿ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದರು. ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಇದೀಗ ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ತೀರ್ಪು ಪ್ರಕಟಿಸಿದೆ.




