ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಘಟನೆಯ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಖಾಸಗಿ ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಹಾಗೂ ಸಾರ್ವಜನಿಕವಾಗಿ ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸುವ ಕುರಿತು ಮತ್ತು ಸಂಘಟನೆಯ ಘನತೆಗೆ ಕುಂದು ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆರೆಸ್ಸೆಸ್ ಕಾರ್ಯಕರ್ತ ಎ. ತೇಜಸ್ ಎಂಬುವವರು ನ್ಯಾಯಾಲಯದಲ್ಲಿ ಖಾಸಗಿ ದೂರು (ಪಿಸಿಆರ್) ದಾಖಲಿಸಿದ್ದರು.
ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ; ಆರ್‌ಎಸ್‌ಎಸ್ ಬೆಂಬಲಿಗ ದಿನೇಶ್ ಬಂಧನ
ದೂರಿನ ವಿಚಾರಣೆ ನಡೆಸಿದ ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯವು, ಖರ್ಗೆ, ಹ್ಯಾರಿಸ್ ವಿರುದ್ಧ ಐಪಿಸಿ ಸೆಕ್ಷನ್ 499 (ನಿರಾಧಾರ ಆರೋಪ/ಮಾನಹಾನಿ) ಮತ್ತು 500 (ಮಾನಹಾನಿಗೆ ಶಿಕ್ಷೆ) ಅಡಿಯಲ್ಲಿ ಮೇಲ್ನೋಟಕ್ಕೆ ಪ್ರಕರಣ ದಾಖಲಿಸಲು ಸತ್ಕಾರಣಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಇಬ್ಬರು ಜನಪ್ರತಿನಿಧಿಗಳಿಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿ ಸಮನ್ಸ್ ನೀಡಿದ್ದಾರೆ.
ಇತ್ತೀಚೆಗೆ ಸಚಿವ ಪ್ರಿಯಾಂಕ ಖರ್ಗೆ ಅವರು, ಶತಮಾನೋತ್ಸವ ಆಚರಿಸುತ್ತಿರುವ ಆರ್‌ಎಸ್‌ಎಸ್‌ನ ನೋಂದಣಿ, ಹಣಕಾಸು ಮೂಲಗಳು ಹಾಗೂ ಕಾನೂನು ಮಾನ್ಯತೆಯ ಕುರಿತು ಪ್ರಶ್ನೆಗಳನ್ನು ಎತ್ತಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.




