ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮರಣ ಹೊಂದಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ಅವಧಿಯನ್ನು ಒಂದು ತಿಂಗಳು ಅವಧಿಗೆ ವಿಸ್ತರಿಸಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿತ್ತು.
ಈ ಮಧ್ಯೆ,04.06.2025 ರಂದು ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಿಂದ ಸಂಭವಿಸಿದ ಸಾವು ಹಾಗೂ ಗಾಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಲಾಗಿದೆ. ಈ ವಿಷಯ ವ್ಯಾಪ್ತಿಯು ತುರ್ತಾಗಿರುವುದರಿಂದ, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಲು ಸೂಚಿಸಲಾಗಿದೆ.