ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ 42 ಮಂದಿ ಜಾತಿಗ್ರಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶುಕ್ರವಾರ ಗ್ರಾಮದಲ್ಲಿ ನಡೆದ ‘ಅಜ್ಜಿಹಬ್ಬ’ ಆಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದವರು ಸಂಪ್ರದಾಯದಂತೆ ಎಡೆ ಮತ್ತು ‘ಅಮ್ಮ (ಕೇಲು)’ಗಳನ್ನು ಪೂಜಿಸಿ ಗ್ರಾಮದ ಗಡಿಭಾಗದತ್ತ ಕೊಂಡೊಯ್ಯುತ್ತಿದ್ದರು. ಈ ವೇಳೆ, ದೊಡ್ಡಯ್ಯಸ್ವಾಮಿ ದೇವಸ್ಥಾನದ ಸಮೀಪಕ್ಕೆ ಬಂದಾಗ, ಗ್ರಾಮದ ಪ್ರಬಲ ಜಾತಿಯವರು ದೇವಸ್ಥಾನದ ಬಳಿ ಬರಬಾರದು ಎಂದು ತಡೆದು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಬಳಿಕ ಅಧಿಕಾರಿಗಳ ಸಮ್ಮುಖದಲ್ಲೇ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ”ಸಂವಿಧಾನ ಮತ್ತು ಕಾನೂನಿನ ಮುಂದೆ ಎಲ್ಲರೂ ಸಮಾನರು. ಜಾತಿ ಆಧಾರದ ಮೇಲೆ ಸಾರ್ವಜನಿಕ ಸ್ಥಳಗಳು, ಹೋಟೆಲ್‌ಗಳು, ಅಂಗಡಿಗಳು ಅಥವಾ ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಚ್ಚರಿಕೆ ನೀಡಿದರು.
ಗ್ರಾಮದ ರುದ್ರಭೂಮಿ ಜಾಗ ಅತಿಕ್ರಮಣಗೊಂಡಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅದನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ತಹಸೀಲ್ದಾರ್ ನೇತೃತ್ವದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಮಾತನಾಡಿ, “ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.
ಉಪವಿಭಾಗಾಧಿಕಾರಿ ಡಾ. ಚನ್ನಪ್ಪ ಮಾತನಾಡಿ, “ಘಟನೆ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ದೇವಸ್ಥಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸುವ ಹಕ್ಕು ನೀಡಿದ್ದು, ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.




