ದೇಶದಾದ್ಯಂತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಇದರಿಂದಾಗಿ, ಜನಸಂಖ್ಯೆ ಬೆಳವಣಿಗೆಯನ್ನು ನಿಯಂತ್ರಿಸುತ್ತಿರುವ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದ ನಿಯೋಗವು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದೆ.
ತಮಿಳುನಾಡು ಸರ್ಕಾರದ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ಪ್ರತಿಭಟನೆಗಳನ್ನು ನಡೆಸುವುವ ಕುರಿತು ಚರ್ಚೆ ನಡೆಸಿದ್ದಾರೆ.
ಕ್ಷೇತ್ರ ಮರುವಿಂಗಡಣೆ ಸೇರಿದಂತೆ ಕೇಂದ್ರ ಸರ್ಕಾರವು ದಕ್ಷಿಣ ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾಗಿ ತೆಗೆದುಕೊಳ್ಳುತ್ತಿರುವ ನಿಲುವು, ನೀತಿ, ನಿರ್ಧಾರಗಳ ವಿರುದ್ಧ ದಕ್ಷಿಣದ ರಾಜ್ಯಗಳು ಒಗ್ಗಟ್ಟಾಗಿ ಧ್ವನಿ ಎತ್ತಬೇಕು ಎಂಬುದು ಚರ್ಚೆಯ ವಿಷಯವಾಗಿತ್ತು ಎಂದು ತಿಳಿದುಬಂದಿದೆ. ಅಲ್ಲದೆ, ಇದೇ ವಿಚಾರವಾಗಿ ಸಿದ್ದರಾಮಯ್ಯ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡ ದೂರವಾಣಿ ಕರೆಯಲ್ಲಿ ಚರ್ಚಿಸಿದ್ದಾರೆ.
ದಕ್ಷಿಣ ರಾಜ್ಯಗಳ ಒಗ್ಗಟ್ಟಿನ ಪ್ರತಿರೋಧಕ್ಕೆ ಕರ್ನಾಟಕವೂ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
“ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ” ಎಂದು ಹೇಳಿದ್ದಾರೆ.