ವಿಶ್ವವಿದ್ಯಾಲಯಗಳು ಸೇರಿದಂತೆ ವಿವಿಧ ಪ್ರಮುಖ ಇಲಾಖೆಗಳಲ್ಲಿರುವ ಎಸ್‌ಸಿ-ಎಸ್‌ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ವಿವಿಧ ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು, ಕಾನೂನುಬದ್ಧ ಮೀಸಲಾತಿಯ ಜೊತೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುವುದು ಎಂದರು. ವಿಶ್ವವಿದ್ಯಾಲಯಗಳು ಹಾಗೂ ಪ್ರಮುಖ ಇಲಾಖೆಗಳಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ತಿಳಿಸಿದರು.
ಪಿಟಿಸಿಎಲ್ ಕಾಯ್ದೆಯ ತಿದ್ದುಪಡಿ ಬಳಿಕವೂ ಅದರ ಸಮರ್ಪಕ ಅನುಷ್ಠಾನವಾಗುತ್ತಿಲ್ಲ ಎಂಬ ದಲಿತ ಸಂಘಟನೆಗಳ ಅಹವಾಲನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಅಗತ್ಯ ತೀರ್ಮಾನ ಕೈಗೊಳ್ಳುವುದಾಗಿ ಪರಮೇಶ್ವರ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ದಲಿತ ಸಮುದಾಯದ ಮಹಿಳೆಯರಿಗೆ ಸಮರ್ಪಕ ಪ್ರಯೋಜನ ತಲುಪುತ್ತಿಲ್ಲ ಎಂಬ ವಿಚಾರವನ್ನು ಸಂಘಟನೆಗಳು ಸಭೆಯಲ್ಲಿ ಪ್ರಸ್ತಾಪಿಸಿವೆ. ಯಾವ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಸಮಸ್ಯೆ ಇದೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುವುದು. ಅನ್ಯಾಯವಾಗಿರುವುದು ಕಂಡುಬಂದರೆ ಅದನ್ನು ತಕ್ಷಣ ಸರಿಪಡಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.
ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿವೇತನದ ಮೊತ್ತ ಪ್ರಸ್ತುತ ವೆಚ್ಚಕ್ಕೆ ಸಾಕಾಗುತ್ತಿಲ್ಲ ಎಂಬ ಬೇಡಿಕೆಯನ್ನೂ ಸಂಘಟನೆಗಳು ಮುಂದಿಟ್ಟಿವೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಮುಂದಿನ ಬಜೆಟ್‌ನಲ್ಲಿ ವಿದ್ಯಾರ್ಥಿವೇತನ ಹೆಚ್ಚಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದರು.
ಅರಣ್ಯ ಪ್ರದೇಶಗಳಲ್ಲಿ ಅಲೆಮಾರಿ ಹಾಗೂ ಆದಿವಾಸಿ ಸಮುದಾಯದವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅನಗತ್ಯ ತೊಂದರೆ ನೀಡುತ್ತಿರುವ ಆರೋಪಗಳ ಕುರಿತು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಮತ್ತೆ ಏಕಗವಾಕ್ಷಿ ವ್ಯವಸ್ಥೆಯಡಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಅನುಷ್ಠಾನಗೊಳಿಸುವಂತೆ ಸಂಘಟನೆಗಳು ಸಲ್ಲಿಸಿರುವ ಸಲಹೆಯನ್ನೂ ಸರ್ಕಾರ ಪರಿಶೀಲಿಸಲಿದೆ ಎಂದರು.
ಕೆಐಎಡಿಬಿ ಭೂಮಿ ಹಂಚಿಕೆ ಹಾಗೂ ಲೇಔಟ್‌ಗಳಲ್ಲಿ ದಲಿತರಿಗೆ ಮೀಸಲಾತಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲಾಗುವುದು. ಕೆಎಸ್‌ಎಫ್‌ಸಿ ಮೂಲಕ ಕೈಗಾರಿಕಾ ಸಾಲ ವಿತರಣೆಯನ್ನು ಪುನರಾರಂಭಿಸುವ ಕುರಿತು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧೀನದಲ್ಲಿದೆ ಎನ್ನಲಾದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ 150 ಎಕರೆ ಭೂಮಿಯ ಕುರಿತು ತನಿಖೆ ನಡೆಸಲು ಕಂದಾಯ ಇಲಾಖೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದರು. ಬೆಂಗಳೂರು ವಿಭಾಗದ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸಲಿದ್ದು, ಸತ್ಯಾಂಶ ಹೊರಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿದೇಶ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿವೇತನವನ್ನು ಸಂಬಂಧಿತ ದೇಶದ ವಿಶ್ವವಿದ್ಯಾಲಯಗಳ ಶುಲ್ಕಕ್ಕೆ ಅನುಗುಣವಾಗಿ ಪರಿಷ್ಕರಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು. ಅಲ್ಲದೆ, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಬ್ಯಾಕ್‌ಲಾಗ್ ಹುದ್ದೆಗಳ ಮೂಲಕ ನೇರ ನೇಮಕಾತಿ ಹಾಗೂ ಪಿಎಚ್‌ಡಿ ಪದವಿ ಪಡೆದಿರುವ ಆದಿವಾಸಿ ಸಮುದಾಯದ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ ಮೂಲಕ ಉದ್ಯೋಗ ಕಲ್ಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ ಖಂಡಿಸಿ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ನಕಾರ
ಆರ್‌ಟಿಇ ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ 9 ಮತ್ತು 10ನೇ ತರಗತಿಗಳ ಪ್ರವೇಶದ ಮೇಲಿರುವ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಪರಮೇಶ್ವರ ಹೇಳಿದರು.
ಜಾತಿ ಪ್ರಮಾಣಪತ್ರ ವಿತರಣೆಗೆ 21 ದಿನಗಳ ಕಾಲಮಿತಿಯನ್ನು ನಿಗದಿಪಡಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ ಎಂದರು. ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ಕುರಿತು ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕತ್ವ ಮತ್ತು ನಿವಾಸ ಪ್ರಮಾಣಪತ್ರ ಎರಡು ಭಿನ್ನ ವಿಚಾರಗಳಾಗಿದ್ದು, ಪಿಆರ್‌ಸಿ ನೀಡಲು ಕಟ್ಟುನಿಟ್ಟಿನ ಮಾನದಂಡಗಳನ್ನು ರೂಪಿಸಲಾಗಿದೆ. ಅಕ್ರಮ ವಲಸಿಗರಿಗೆ ಯಾವುದೇ ರೀತಿಯ ಸವಲತ್ತು ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಶಿವಾಜಿನಗರದಲ್ಲಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಪ್ರೊ. ಇಂದಿರಾ ಕೃಷ್ಣಪ್ಪ, ಎಂ. ವೆಂಕಟಸ್ವಾಮಿ, ಶ್ರೀಧರ್ ಕಲಿವೀರ, ಸುಬ್ಬು ಹೊಲೆಯಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





