ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಲ್ಲಿನ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿದ್ದ ಎಚ್.ಕೆ ಮುನಿಯಪ್ಪ ಮತ್ತು ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನ ಮಾಡಲಾಗಿದೆ. ಆದರೆ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರ ಅಸಮಾಧಾನಕ್ಕೆ ಇನ್ನೂ ಅಂತ್ಯ ಕಂಡಿಲ್ಲ. ತಾವು ಬೆಂಗಳೂರು ನಗರಾಭೀವೃದ್ಧಿ ಖಾತೆಯನ್ನು ನಿರ್ವಹಿಸಬೇಕೆಂದರೆ, ಬೆಂಗಳೂರು ನಗರದ ಪ್ರಮುಖ ಆರ್ಥಿಕ ಮತ್ತು ಆಡಳಿತಾತ್ಮಕ ಶಕ್ತಿ ಕೇಂದ್ರಗಳಾಗಿರುವ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ವ್ಯಾಪ್ತಿಗಳನ್ನೂ ಸಹ ತಮ್ಮ ಸುಪರ್ದಿಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಆ ಖಾತೆಯೇ ಬೇಡವೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಬಿಡಿಎ ಮತ್ತು ಬಿಎಂಆರ್‌ಡಿಎ – ಪ್ರಾಧಿಕಾರಗಳನ್ನು ತನ್ನ ಖಾತೆಯ ವ್ಯಾಪ್ತಿಗೆ ಸೇರಿಸುವಂತೆ ಅವರು ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಗಮನಕ್ಕೆ ತಂದಿದ್ದಾರೆ. ಆದರೂ, ರಾಜ್ಯ ನಾಯಕತ್ವದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ರಾಜ್ಯ ಮಟ್ಟದಲ್ಲಿ ತಮ್ಮ ಬೇಡಿಕೆಗೆ ಮನ್ನಣೆ ಸಿಗದ ಕಾರಣ, ಬೇಸತ್ತ ಕೃಷ್ಣ ಬೈರೇಗೌಡ ಅವರು ಹೈಕಮಾಂಡ್ ಮಟ್ಟದಲ್ಲೇ ತಮ್ಮ ಬೇಡಿಕೆಯನ್ನು ಈಡೇರಿಸಿಕೊಳ್ಳಲು ನೇರವಾಗಿ ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಸುರ್ಜೇವಾಲ ಸೇರಿದಂತೆ ಕೇಂದ್ರದ ಪ್ರಮುಖ ನಾಯಕರನ್ನು ಭೇಟಿ ಮಾಡಿ ತಮಗಾಗಿರುವ ಅನ್ಯಾಯ ಹಾಗೂ ಬಿಡಿಎ-ಬಿಎಂಆರ್‌ಡಿಎ ಪ್ರಾಧಿಕಾರಗಳ ಅಗತ್ಯತೆಯ ಕುರಿತು ಮನವರಿಕೆ ಮಾಡಿಕೊಡಲಿದ್ದಾರೆ ಎಂದು ವರದಿಯಾಗಿದೆ.




