ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಮುಂಜಾನೆ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ ಹೊಂದಿದ್ದ ಅವರು, 1953ರಲ್ಲೇ ಸಂಘದ ಸಂಪರ್ಕಕ್ಕೆ ಬಂದು ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970ರಲ್ಲಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದರು. ಬಿಜೆಪಿಯ ಮುಂಚಿನ ರೂಪವಾಗಿದ್ದ ‘ಭಾರತೀಯ ಜನಸಂಘ’ದ ವತಿಯಿಂದ ಅಂದಿನ ಬೆಂಗಳೂರು ನಗರ ಪಾಲಿಕೆಗೆ ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ಅವರದ್ದಾಗಿತ್ತು.
ಸತತವಾಗಿ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದ ಆರೋಪ ಕೇಳಿಬಂದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಮಚಂದ್ರೇಗೌಡರ ನಿಧನಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂತಾಪ
ರಾಮಚಂದ್ರೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. “ಸರಳ, ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ರಾಮಚಂದ್ರಗೌಡರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಬಂಧುಬಳಗಕ್ಕೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.





