ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಗಂಭೀರ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಆದೇಶ ಹೊರಡಿಸಲಾಗಿದೆ. ಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಸ್ಥಳಾಂತರಿಸಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಇತ್ತೀಚೆಗೆ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಪತ್ತೆಯಾಗಿತ್ತು. ಕಾರಾಗೃಹದ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿ, ಬ್ಯಾರಕ್‌ನಿಂದಲೇ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ಕೂಡ ದಾಖಲಾಗಿತ್ತು.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ತಮ್ಮ ವಶಕ್ಕೆ ಪಡೆದಿದ್ದರು. ಜೈಲಿನಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ತಡೆಯಲು ಭದ್ರತಾ ದೃಷ್ಟಿಯಿಂದ ಪ್ರಜ್ವಲ್ ಸೇರಿದಂತೆ 9 ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಬೆಂಗಳೂರು ಪೊಲೀಸರು ಕಾರಾಗೃಹ ಇಲಾಖೆಗೆ ಲಿಖಿತ ಮನವಿ ಸಲ್ಲಿಸಿದ್ದರು.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು, ಪ್ರಜ್ವಲ್ ರೇವಣ್ಣ ಮತ್ತು ಇತರ ಐದು ಮಂದಿ ಕೈದಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ತಕ್ಷಣವೇ ಸ್ಥಳಾಂತರಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಭದ್ರತಾ ವೈಫಲ್ಯದ ಹೊಣೆ ಹೊರಿಸಿ ಇಬ್ಬರು ಜೈಲಾಧಿಕಾರಿಗಳನ್ನೂ ಸಹ ವರ್ಗಾವಣೆ ಮಾಡಲಾಗಿದೆ.
ಡಿಜಿಪಿ ಅವರ ಆದೇಶದ ಮೇರೆಗೆ, ಕಾರಾಗೃಹ ಇಲಾಖೆಯ ಸಿಬ್ಬಂದಿಯು ಬಿಗಿ ಭದ್ರತೆಯಲ್ಲಿ ಶುಕ್ರವಾರ ಸಂಜೆ ಅಥವಾ ರಾತ್ರಿಯ ವೇಳೆಗೇ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಗೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




