ಈ ವರ್ಷ ಸಮುದ್ರದ ಮೇಲ್ಮೈ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಹೆಚ್ಚಾಗುವ ಸಾಧ್ಯತೆಯಿದ್ದು, ಇದು 1877ರ ನಂತರದ ಅತ್ಯಂತ ಪ್ರಬಲ ‘ಸೂಪರ್’ ಅಥವಾ ‘ಗಾಡ್ಜಿಲ್ಲಾ’ ಎಲ್ ನಿನೋ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಇದರ ಪ್ರಭಾವದಿಂದ ರಾಜ್ಯದ 236 ತಾಲೂಕುಗಳ ಪೈಕಿ ಸುಮಾರು 122 ತಾಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಲಿದ್ದು, ʼಬರʼಗಾಲ ಉಂಟಾಗುವ ಆತಂಕವಿದೆ. ಈ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಆರಂಭಿಸಬೇಕೆಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಡಿಸಿಎಂ, ‘ಸೂಪರ್’ ಎಲ್ ನಿನೋ (Super El Niño) ಪ್ರಭಾವದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದರು.
ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಮತ್ತು ಜಲ ಸಂರಕ್ಷಣೆಗಾಗಿ ಜಿಲ್ಲಾವಾರು ಕ್ರಿಯಾಯೋಜನೆಗಳನ್ನು ಸಿದ್ಧಪಡಿಸಬೇಕು. ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಸ್ಥಿತಿ ಮತ್ತು ನೀರಿನ ಬಳಕೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಕುಡಿಯುವ ನೀರಿನ ಉದ್ದೇಶಕ್ಕಾಗಿ ಬೋರ್‌ವೆಲ್ ಕೊರೆಯಲು ಅನುಮತಿ ನೀಡುವಲ್ಲಿ ಯಾವುದೇ ವಿಳಂಬ ಮಾಡಬಾರದು. ಅಗತ್ಯವಿದ್ದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಕಲಬುರಗಿ | ಎಳೆ ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಆತ್ಮಹತ್ಯೆ!
This video cannot be played in your browser. Open the video directly
ಪ್ರಸ್ತುತ 669 ಹಳ್ಳಿಗಳಿಗೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. 139 ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸಮಸ್ಯೆ ಬರದಂತೆ ಕ್ರಮಕೈಗೊಳ್ಳಲು ತಿಳಿಸಿದರು.
ರಾಜ್ಯದಲ್ಲಿ ಈ ಬಾರಿ ಶೇ. 42 ರಷ್ಟು ಮಳೆಯ ಕೊರತೆಯಾಗಿದೆ. 145 ಮಿ.ಮೀ. ಮಳೆಯ ನಿರೀಕ್ಷೆಯಿದ್ದರೂ, ಇದುವರೆಗೆ ಕೇವಲ 83 ಮಿ.ಮೀ. ಮಳೆಯಾಗಿದೆ ಎಂದು RDPR ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕಳೆದ ಆರು ವರ್ಷಗಳಿಗೆ ಹೋಲಿಸಿದರೆ 2026ನೇ ವರ್ಷ ಮಳೆಯ ದೃಷ್ಟಿಯಿಂದ ಅತ್ಯಂತ ಕಠಿಣವಾಗಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.





