ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ. ಒಟ್ಟು 12 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ (ಅಕ್ಟೋಬರ್ 8ರಿಂದ 10) ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಅಧಿಕೃತ ಮಾಹಿತಿಯಂತೆ, 12 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: ಹವಾಮಾನ ಮುನ್ಸೂಚನೆ | ದೆಹಲಿಯಲ್ಲಿ ಮುಂದುವರೆದ ಬಿಸಿಲು: ಮಳೆ ಎಲ್ಲೆಲ್ಲಿ?
ದಕ್ಷಿಣ ಒಳನಾಡು ಹಾಗೂ ಮಲೆನಾಡಿನ 9 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಿಂಚು ಹಾಗೂ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮುಖ್ಯವಾಗಿ ಒಣ ಹವಾಮಾನವೇ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೃಷಿಕರು ಮತ್ತು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.




