ರಾಜ್ಯದಲ್ಲಿ ನವೆಂಬರ್ 8ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಮುಂದಿನ ಎರಡು ದಿನಗಳ ಕಾಲ ಒಣಹವೆ ಇರಲಿದೆ.
ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
ಇನ್ನು ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆಯಿದೆ. ನವೆಂಬರ್ 6 ಮತ್ತು 7ರಂದು ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ವರದಿ ಉಲ್ಲೇಖಿಸಿದೆ.
ಇದನ್ನು ಓದಿದ್ದೀರಾ? ಮುಂದಿನ ಮೂರು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ
ನವೆಂಬರ್ 8ರಂದು ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು
ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗಲಿದೆ.
ನವೆಂಬರ್ 9ರಂದು ಕೋಲಾರ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿದ್ದೀರಾ? ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ: ಹವಾಮಾನ ಇಲಾಖೆ
ನವೆಂಬರ್ 10ರಂದು ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 8ರಿಂದ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
