ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು – ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆಯಿಂದಲೇ ಮಳೆಯಾಗಿದೆ. ಭಾನುವಾರವೂ ಜಿಲ್ಲೆಯ ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ಹಗುರವಾದ ಮಳೆ ಅಥವಾ ತುಂತುರು ಮಳೆಯಾಗುವ ಮುನ್ಸೂಚನೆ ಇದೆ.
ಇನ್ನು ಉಡುಪಿ ಜಿಲ್ಲೆಯಲ್ಲೂ ಹಗಲಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗಾಳಿ ಮತ್ತು ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆಯಿದೆ. ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾರ್ಕಳ ಹಾಗೂ ಕಾಪು ತಾಲೂಕುಗಳಲ್ಲಿ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.
ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಅಧಿಕೃತವಾಗಿ 4 ಸೆಂಟಿಮೀಟರ್ ಮಳೆ ದಾಖಲಾಗಿದೆ. ಇದರೊಂದಿಗೆ ಪುತ್ತೂರಿನಲ್ಲಿ 3 ಸೆಂಟಿಮೀಟರ್ ಹಾಗೂ ಬಂಡೀಪುರ, ಭಾಗಮಂಡಲ, ಧರ್ಮಸ್ಥಳ, ಸೋಮವಾರಪೇಟೆ, ಸುಳ್ಯ ಮತ್ತು ಟಿ.ಜಿ.ಹಳ್ಳಿಯಲ್ಲಿ ತಲಾ 2 ಸೆಂಟಿಮೀಟರ್ ಮಳೆಯಾಗಿದೆ.
ಇನ್ನು, ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಸಂಪೂರ್ಣ ಒಣಹವೆ ಮುಂದುವರಿಯಲಿದೆ.



