ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸುತ್ತಿದೆ. ನಾನಾ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. 13 ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹೇಳಿದೆ.
ಹವಾಮಾನ ವರದಿ ಪ್ರಕಾರ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಮತ್ತು ಕೋಲಾರ ಜಿಲ್ಲೆಗಳು ಹಾಗೂ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿ ಅತ್ಯಧಿಕ – 7 ಸೆಂ.ಮೀ. ಮಳೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ 4 ಸೆಂ.ಮೀ., ಕೊಣನೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಂ.ಮೀ. ಮಳೆ ಸುರಿದಿದೆ. ಮಂಗಳೂರು, ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ಹಾಗೂ ಬಂಟ್ವಾಳ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಆದಾಗ್ಯೂ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆಯೇ ಮುಂದುವರಿಯಲಿದೆ. ಈ ಪ್ರದೇಶಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ, ಹಗಲಿನಲ್ಲಿ ತೀವ್ರ ಬಿಸಿಲು ಮತ್ತು ಸೆಕೆಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ದಕ್ಷಿಣ ಒಳನಾಡಿನ ವ್ಯಾಪ್ತಿಗೆ ಒಳಪಡುವ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಹವಾಮಾನವು ಒಣಹವೆಯಿಂದ ಕೂಡಿದ್ದು, ಬಿಸಿಲ ವಾತಾವರಣ ಇರಲಿದೆ. ಆದರೂ, ಸಂಜೆ ವೇಳೆ ಸೋನೆ ಮಳೆಯಾಗುವ ನಿರೀಕ್ಷೆಯೂ ಇದೆ ಎಂದು ಇಲಾಖೆ ಹೇಳಿದೆ.



