ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಚಿಸಿದೆ.
ವಿಶೇಷವಾಗಿ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ನದಿಗಳ ನೀರಿನ ಮಟ್ಟ ಹೆಚ್ಚಾಗುವ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ ಎಂದು ಇಲಾಖೆ ಹೇಳಿದೆ. ಸ್ಥಳೀಯ ಆಡಳಿತ ಮತ್ತು ಸಾರ್ವಜನಿಕರಿಗೆ ಸೂಕ್ತ ಎಚ್ಚರಿಕೆ ವಹಿಸಲು ಸೂಚಿಸಿದೆ.
ಇನ್ನು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೋಲಾರ ಹಾಗೂ ಚಿಕ್ಕಬಳ್ಳಾಪುರ, ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹೇಳಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣ ಇರಲಿದೆ. ನಗರದ ವಿವಿಧ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಮರಗಳು ಧರೆಗುರುಳುವ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಗಳ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ.



