ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಮಾತ್ರವಲ್ಲದೆ, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 19 ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗವೂ ಗಂಟೆಗೆ ಸುಮಾರು 40 ಕಿ.ಮೀ. ವೇಗದಲ್ಲಿ ಬೀಸಲಿದೆ ಎಂದಿರುವ ಇಲಾಖೆ, ಹಲವು ಜಿಲ್ಲೆಗಳಿಗೆ ಹೈ-ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಮಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರ ರಾತ್ರಿಯಿಂದಲೇ ಬಿಟ್ಟುಬಿಡದೆ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದೆ. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆದಿದೆ. ಆದರೂ, ಅನಿರೀಕ್ಷಿತ ಮಳೆಯಿಂದಾಗಿ ದಿನನಿತ್ಯದ ಜನಜೀವನ ಕೊಂಚ ಅಸ್ತವ್ಯಸ್ತಗೊಂಡಿದೆ.
ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗಿನಲ್ಲೂ ರಾತ್ರಿಯಿಡೀ ಧಾರಾಕಾರ ಮಳೆಯಾಗಿದೆ. ವಿಶೇಷವಾಗಿ ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಶೃಂಗೇರಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸಕಲೇಶಪುರ ಹಾಗೂ ಮಡಿಕೇರಿ ತಾಲೂಕುಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ.
ಈ ಲೇಖನ ಓದಿದ್ದೀರಾ?: ಸುದ್ದಿ ವಿವರ | ಇವಿಎಂ vs ಬ್ಯಾಲೆಟ್ ಪೇಪರ್: ಯಾಕೀ ವಿವಾದ?
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಗೆ ಸಾಧಾರಣ ಮಳೆಯಾಗಲಿದೆ. ಅಂತೆಯೇ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಮತ್ತು ಬಳ್ಳಾರಿ ಭಾಗಗಳಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಭೀಕರ ಸಿಡಿಲು ಬಡಿದು ನಾಗೇಶ್ ಕುಲಾಲ್ ಎಂಬುವವರ ಮನೆ ಸಂಪೂರ್ಣ ಖಜಂಗೊಂಡಿವೆ. ಸಿಡಿಲಿನ ತೀವ್ರತೆಗೆ ಮನೆಯ ಹಂಚುಗಳು, ಗೋಡೆಗಳು ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಘಟನೆಯಲ್ಲಿ ನಾಗೇಶ್ ಅವರ ಪತ್ನಿ ಕುಶಲ ಅವರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.



