ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ನಲುಗಿ ಹೋಗಿವೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮೇ 23ರವರೆಗೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಲೇಖನ ಓದಿದ್ದೀರಾ?: ‘ತಿರಂಗಾ ಯಾತ್ರೆ’ ಯಾರಿಗಾಗಿ? ದೇಶಕ್ಕೋ-ಮೋದಿಗೋ?
ಶನಿವಾರ ಮಧ್ಯಾಹ್ನದಿಂದಲೇ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಂಬಿಡದೆ ಸುರಿದ ಮಳೆಯಿಂದಾಗಿ, ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು. ಅದರಲ್ಲೂ ಸಾಯಿ ಲೇಔಟ್ ಸಂಪೂಂರ್ಣ ಜಲವೃತಗೊಂಡು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‌ಸಿಬಿ-ಕೆಕೆಆರ್ ನಡುವಿನ ಪಂದ್ಯ ರದ್ದಾಗಿದೆ.
ಬೆಂಗಳೂರು ಮಾತ್ರವಲ್ಲದೆ, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಮಂಡ್ಯ, ಹಾಸನ, ಮೈಸೂರು, ಕೋಲಾರ, ಗದಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಿದೆ. ಗುಂಡ್ಲುಪೇಟೆ, ಗುತ್ತಲ್, ಹರಪನಹಳ್ಳಿ, ಧರ್ಮಸ್ಥಳ, ಬೆಳ್ಳೂರು, ನಾಗಮಂಗಲ, ಕುಮಟಾ, ಕದ್ರಾ, ಪುತ್ತೂರು, ಯಗಟಿ, ಸೋಮವಾರಪೇಟೆ, ಬರಗೂರು, ಟಿಜಿ ಹಳ್ಳಿ, ನಾಪೋಕ್ಲು, ಮಸ್ಕಿ, ಬಾದಾಮಿ, ಅಂಕೋಲಾ ಸೇರಿದಂತೆ ನಾನಾ ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ.