ರಾಜ್ಯಾದ್ಯಂತ ಜೂನ್ 8ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ ಹಲವು ದಿನಗಳವರೆಗೆ ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಜೂನ್ 4ರಂದು ಕೇರಳ ಮೂಲಕ ಪ್ರವೇಶಿಸಿದ್ದು, ನೈಋತ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದ ಉಳಿದ ಭಾಗಗಳು, ಪಶ್ಚಿಮ ಮಧ್ಯ ಮತ್ತು ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಸಂಪೂರ್ಣ ಲಕ್ಷದ್ವೀಪ, ಕೇರಳ, ಮಾಹೆ, ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡ, ಕೊಮೊರಿನ್ ಪ್ರದೇಶದ ಉಳಿದ ಭಾಗಗಳು, ಬಂಗಾಳ ಕೊಲ್ಲಿಯ ಆಗ್ನೇಯ, ಬಂಗಾಳ ಕೊಲ್ಲಿಯ ನೈಋತ್ಯ, ಪಶ್ಚಿಮ ಮಧ್ಯ, ಪೂರ್ವ ಮಧ್ಯ, ಈಶಾನ್ಯ ಕೆಲವು ಭಾಗಗಳಿಗೆ ಮುಂದುವರೆದಿದೆ.
ಇದನ್ನು ಓದಿದ್ದೀರಾ? ಹವಾಮಾನ ವರದಿ: 22 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ!
ಜೂನ್ 10ರವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಧಾರವಾಡ, ಗದಗ ಮತ್ತು ಕೊಪ್ಪಳದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಹಾವೇರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಸಹಿತ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಸಹಿತ ಗುಡುಗು ಮಳೆಯಾಗಲಿದೆ. ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.





