ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದ್ದು, ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿಕೆ. ಕರ್ನಾಟಕದಲ್ಲಿ ಉತ್ತರ ಒಳನಾಡು ಮತ್ತು ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.
ಬೆಳಗಾವಿ, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದಲ್ಲಿ ಕಳೆದ ಒಂದು ವಾರದಲ್ಲಿ ಭಾರೀ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ಸುಮಾರು 110 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, 3.4 ಮಿಮೀ ಮಳೆ ದಾಖಲಾಗಿದೆ. ಬನಶಂಕರಿ, ಜೆಪಿನಗರ, ಶಾಂತಿನಗರ, ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್. ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ರಾಜಾಜಿನಗರ, ಯಶವಂತಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಸುರಿದಿದೆ.