ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಜುಲೈ 9 ಮತ್ತು ಜುಲೈ 10ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲೂ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಕೂಡ ಬಿರುಗಾಳಿ ಸಹಿತ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನಕ್ಕೆ ಅಲ್ಪಮಟ್ಟಿನ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಕೊಂಚ ಹೆಚ್ಚು ಮಳೆ ಇರಲಿದ್ದು, ಜುಲೈ 5, 6, 9 ಮತ್ತು 10ರಂದು ಒಂದಲ್ಲಾ ಒಂದು ಕಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಅಂದಾಜಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ(40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೀದರ್, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ(40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ನಿರಂತರ ಗಾಳಿಯೊಂದಿಗೆ(40-50 ಕಿ.ಮೀ.) ಹಗುರ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿದ್ದೀರಾ? ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರೀ ಮಳೆ: ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ
ಬಿರುಗಾಳಿ ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸೂಚಿಸಿದೆ.




