ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹಲವಾರು ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಳಗಾವಿ, ಧಾರವಾಡ, ಹಾವೇರಿ ಇಲ್ಲೆಗಳಲ್ಲಿ ಈ ವಾರವೂ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ. ಈ ಜಿಲ್ಲೆಗಳ ಪೈಕಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಂತೆಯೇ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಶನಿವಾರ ಸುರಿದ ಭಾರೀ ಮಳೆಯಿಂದಾಗಿ ತುಂಗಾ, ಕಪಿಲಾ ಹಾಗೂ ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದ ಪರಿಣಾಮ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿದಿದ್ದು, ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಭಾನುವಾರ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.




