ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಸೂಚಿಸಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಕರಾವಳಿ ಭಾಗದಲ್ಲಿ ತಂಪಾದ ವಾತಾವರಣ ಇರಲಿದೆ. ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಹೊರತಾಗಿ, ಬಾಗಲಕೋಟೆ, ಬೆಳಗಾವಿ, ಬಿದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇಲ್ಲಿ ಬಿರುಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿದ್ದೀರಾ? ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸರ್ವಿಸ್ ರಸ್ತೆ ಇಲ್ಲದೆ ರೈತರ ಜಮೀನಿಗೆ ತೆರಳಲು ಸಂಕಷ್ಟ
ಮಳೆ ಮತ್ತು ಬಿರುಗಾಳಿ ಬೀಸುವ ಸಮಯದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ ಮತ್ತು ಮರಗಳ ಕೆಳಗೆ ನಿಲ್ಲಬಾರದು. ರೈತರು ತಮ್ಮ ಬೆಳೆ ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತೆ ವಹಿಸುವುದು ಸೂಕ್ತವಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.





